ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದೀಪೋತ್ಸವದ ಕಾರ್ಯಕ್ರಗಳು ಡಿಸೆಂಬರ್ ಎಂಟರಿಂದ ಆರಂಭಗೊಳ್ಳಲಿದ್ದು, ಡಿಸೆಂಬರ್ 12 ರಂದು ಲಕ್ಷ ದೀಪೋತ್ಸವ ನಡೆಯಲಿದೆ. ಅತಿ ಅದ್ಧೂರಿ ಹಾಗೂ ವಿಜೃಂಭಣೆಯಿಂದ ನಡೆಯುವ ಈ ದೇವತಾ ಕಾರ್ಯವು ಇತರೆ ಉತ್ಸವಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆ ಪಡೆದಿದೆ.
ಐದು ದಿನಗಳ ಕಾಲ ನಡೆಯುವ ಮಂಜುನಾಥ ಸ್ವಾಮಿಯ ಉತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗಿಯಾಗಲಿದ್ದಾರೆ. ಲಕ್ಷ ದೀಪೋತ್ಸವದ ಜೊತೆಗೆ ಶ್ರೀ ಚಂದ್ರನಾಥ ಸ್ವಾಮಿ ಸಮವಸರಣ ಪೂಜೆ ಕೂಡ ನಡೆಲಿದೆ. ಜೊತೆಗೆ ಖ್ಯಾತ ವಿದ್ವಾಂಸರು, ಗಣ್ಯರು ಹಾಗೂ ಕಲಾವಿದರ ಸಹಭಾಗಿತ್ವದಲ್ಲಿ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನಗಳು ಕೂಡ ನಡೆಯಲಿದೆ.
ಡಿಸೆಂಬರ್ 11ರಂದು ಮಂಗಳವಾರ ಸಂಜೆ 5 ಗಂಟೆಗೆ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಬೆಂಗಳೂರಿನ ಇಸ್ರೋದ ಅಧ್ಯಕ್ಷ ಡಾ. ಎಸ್. ಸೋಮನಾಥ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಖ್ಯಾತ ಗಮಕಿ ಡಾ.ಎ.ವಿ. ಪ್ರಸನ್ನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಹೊನ್ನಾವರದ ನಿವೃತ್ತ ಉಪನ್ಯಾಸಕ ಡಾ. ಶ್ರೀಪಾದ ಶೆಟ್ಟಿ, ಬೆಂಗಳೂರಿನ ರಂಗಕರ್ಮಿ ಪ್ರಕಾಶ್ ಬೆಳವಡಿ ಮತ್ತು ಬಂಟ್ವಾಳದ ಡಾ. ಅಜಕ್ಕಳ ಗಿರೀಶ್ ಭಟ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಡಿಸೆಂಬರ್ 10 ರಂದು ಭಾನುವಾರ ರಾತ್ರಿ 7 ರಿಂದ 10ರ ವರೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಬಳಗದವರಿಂದ ಗಾನ, ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ.