ಸಮಗ್ರ ನ್ಯೂಸ್: ರಾಜ್ಯದ ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ಅನುಕೂಲವಾಗುವಂತೆ ಗುಂಪು ವಸತಿ ಯೋಜನೆ ಜಾರಿಗೆ ತರಲು ಸರ್ಕಾರ ಸಜ್ಜಾಗಿದೆ.
ವಿಕಾಸಸೌಧದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು. ಈಗಾಗಲೇ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಆಸ್ಪತ್ರೆ ಸಹಾಯಧನ, ಉಚಿತ ಟೂಲ್ ಕಿಟ್, ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸ್ಕಾಲರ್ ಶಿಪ್ ಸೇರಿದಂತೆ ಹಲವು ಬಹುಪಯೋಗಿ ಸೌಲಭ್ಯಗಳು ಜಾರಿಯಲ್ಲಿವೆ. ಆದರೆ ಕಟ್ಟಡ ನಿರ್ಮಾಣ ಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿರುವ ವಸತಿ ಸೌಲಭ್ಯ ಕುರಿತಾಗಿ ಇದುವರೆಗೂ ಸರ್ಕಾರಗಳು ಅಷ್ಟು ಗಮನ ಹರಿಸಿರಲಿಲ್ಲ. ಆದರೆ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರ ವಸತಿ ಸಮಸ್ಯೆ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿತ್ತು.
ಅದರ ಭಾಗವಾಗಿಯೇ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾರ್ಮಿಕ ಮಂಡಳಿಯ ಕಾರ್ಯದರ್ಶಿ ಭಾರತಿ, ಜಂಟಿ ಕಾರ್ಯದರ್ಶಿ ವೆಂಕಟರಾಜು ಮತ್ತು ಕಾರ್ಮಿಕ ಇಲಾಖೆಯ ಆಯುಕ್ತ ಗೋಪಾಲಕೃಷ್ಣ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ಬಹುತೇಕ ರಾಜ್ಯ ಸರ್ಕಾರದ ವಸತಿ, ಕಾರ್ಮಿಕ ಹಾಗೂ ಪೌರಾಡಳಿತ ಇಲಾಖೆ ಜತೆಗೂಡಿ ಈ ಹೊಸ ಯೋಜನೆ ಜಾರಿಗೆ ತರಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ನೀಲನಕ್ಷೆ ತಯಾರಾಗಿದೆ ಈ ಹಿಂದೆಯೇ ವಸತಿ ಸಚಿವ ಜಮೀರ್ ಅಹಮದ್ ತಿಳಿಸಿದ್ದರು ಎಂಬುದು ಗಮನಾರ್ಹ.
ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ಲಭ್ಯವಿರುವ ಜಮೀನು, ಹಣಕಾಸು ಹೊಂದಾಣಿಕೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಾಯಧನ, ಪೌರಾಡಳಿತ ಹಾಗೂ ಕಾರ್ಮಿಕ ಇಲಾಖೆಗಳಲ್ಲಿ ದೊರೆಯಬಹುದಾದ ಸಹಾಯ ಕುರಿತು ಸಮಗ್ರ ಮಾಹಿತಿಯೊಂದಿಗೆ ಪ್ರಸ್ತಾವನೆ ಸಿದ್ದಪಡಿಸಲು ವಸತಿ ಸಚಿವ ಜಮೀರ್ ಅಹಮದ್ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಈ ಹಿಂದೆಯೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಅದರಂತೆ ರಾಜ್ಯದ ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ಅನುಕೂಲವಾಗುವಂತೆ ಮಹತ್ವದ ಗುಂಪು ವಸತಿ ಯೋಜನೆ ಜಾರಿಗೆ ಬರುವುದು ಬಹುತೇಕ ಖಚಿತವಾಗಿದೆ.