ಸಮಗ್ರ ನ್ಯೂಸ್: ಜ 25ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು, ಕೊಡಗು ಜಿಲ್ಲೆಗೆ ಅತ್ಯಗತ್ಯವಾಗಿ ಬೇಕಿರುವ ಯೋಜನೆಗಳ ಪ್ರಸ್ತಾವನೆ ಸಲ್ಲಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾದ ಡಾ.ಎನ್.ವಿ.ಪ್ರಸಾದ್ ಅವರು ಸಲಹೆ ಮಾಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಕಾನೂನು ಕಾಲೇಜು ಇಲ್ಲದಿರುವುದರಿಂದ ಕಾನೂನು ಕಾಲೇಜು ಆರಂಭ ಸೇರಿದಂತೆ ಹಲವು ಯೋಜನೆಗಳ ಪ್ರಸ್ತಾವನೆಯ ಪಟ್ಟಿಮಾಡಿ ಮುಖ್ಯಮಂತ್ರಿ ಅವರಿಗೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾನೂನು ಪದವೀಧರರಿಗೆ ಎರಡು ವರ್ಷದವರೆಗೆ ಪ್ರತೀ ತಿಂಗಳು 10 ಸಾವಿರ ರೂ. ಪ್ರೋತ್ಸಾಹ ಧನ ನೀಡುವ ಸೌಲಭ್ಯವಿದ್ದು, ಈ ಯೋಜನೆಗೆ ಜಿಲ್ಲೆಯಲ್ಲಿ ಅರ್ಹರು ಸಿಗುತ್ತಿಲ್ಲ ಎಂಬ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪ್ರಸಾದ್ ಅವರ ಗಮನಕ್ಕೆ ತಂದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ವ್ಯಾಪ್ತಿಯಲ್ಲಿ ಫಿಜಿಯೋ ಥೆರಫಿ ಕಾಲೇಜು ಇಲ್ಲದಿರುವ ಬಗ್ಗೆ ಗಮನ ಸೆಳೆದ ಜಿಲ್ಲಾ ಸರ್ಜನ್ ಡಾ.ನಂಜುಡಯ್ಯ ಅವರು, ಈ ಬಗ್ಗೆ ಸೇರಿದಂತೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸಲಹೆ ಮಾಡಿದರು.
ಕುಶಾಲನಗರದಲ್ಲಿ ಕೆಎಸ್ಆರ್ಟಿಸಿ ಬಸ್ ಘಟಕ ಆರಂಭ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಗೆ ಶಿಷ್ಟಾಚಾರದಂತೆ ಸಿದ್ಧತೆ ಮಾಡಿಕೊಳ್ಳಲು ಡಾ.ಎನ್.ವಿ.ಪ್ರಸಾದ್ ಅವರು ಸೂಚಿಸಿದರು. ಕೃಷಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ನಗರ ನೀರು ಪೂರೈಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ನಗರಾಭಿವೃದ್ಧಿ ಕೋಶ, ಇಂದಿರಾ ಕ್ಯಾಂಟಿನ್, ಜಲಜೀವನ್ ಅಭಿಯಾನ, ಏತ ನೀರಾವರಿ, ಮತ್ತಿತರ ಇಲಾಖೆಗಳ ವ್ಯಾಪ್ತಿಯ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಂಬಧಿಸಿದತೆ ಸಂಬಧಪಟ್ಟ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ ಅವರು ಜಿಲ್ಲೆಯಲ್ಲಿ ಐಟಿಡಿಪಿ ಇಲಾಖಾ ವ್ಯಾಪ್ತಿಯಲ್ಲಿ ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯ ಇಲ್ಲದಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗಿದ್ದು, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಆರಂಭಕ್ಕೆ ಅವಕಾಶ ಮಾಡಬೇಕಿದೆ ಎಂದು ಅವರು ಮನವಿ ಮಾಡಿದರು.
ಜಿಲ್ಲೆಯ ಐಟಿಡಿಪಿ ಇಲಾಖಾ ವ್ಯಾಪ್ತಿಯಲ್ಲಿ 11 ಆಶ್ರಮ ಶಾಲೆ, 9 ವಿದ್ಯಾರ್ಥಿ ನಿಲಯ, ಒಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಹಾಗೆಯೇ ಒಂದು ಏಕಲವ್ಯ ಮಾದರಿ ವಸತಿ ಶಾಲೆ ಇದ್ದು, 1500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಸ್ಎಸ್ಎಲ್ಸಿ ನಂತರ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ನಿಲಯ ಬೇಕಿದೆ ಎಂದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಇದನ್ನು ಸಹ ಪ್ರಸ್ತಾವನೆ ಸಲ್ಲಿಸುವಂತೆ ಸಲಹೆ ಮಾಡಿದರು.
ಕೊಡಗು ಜಿಲ್ಲೆಯಲ್ಲಿ ನಿವೇಶನ ರಹಿತ ಆದಿವಾಸಿಗಳಿಗೆ ನಿವೇಶನ ಒದಗಿಸುವಂತಾಗಲು ಪ್ರತಿ ಗ್ರಾ.ಪಂ.ವ್ಯಾಪ್ತಿಯಲ್ಲಿ ನಿವೇಶನ ಒದಗಿಸುವಂತಾಗಬೇಕು. ಇದರಿಂದ ಆದಿವಾಸಿಗಳ ಬದುಕು ಹಸನಾಗಲು ಸಹಕಾರಿಯಾಗಲಿದೆ ಎಂದು ಹೊನ್ನೇಗೌಡ ಅವರು ಕೋರಿದರು. ಜಿಲ್ಲೆಯಲ್ಲಿ ಸಮಾಜ ಕಲ್ಯಾಣ, ಐಟಿಡಿಪಿ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹೀಗೆ ವಿವಿಧ ಇಲಾಖೆಗಳಿಗೆ ವಿದ್ಯಾರ್ಥಿ ನಿಲಯಕ್ಕೆ ನಿವೇಶನ ಬೇಕಿದ್ದಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸಂಬಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕೂರ್ಗ್ಹನಿ ಹೆಸರಿನಲ್ಲಿ ನೋಂದಣಿಯಾಗದಿರುವವರು ಜೇನು ತುಪ್ಪ ಮಾರಾಟ ಮಾಡುತ್ತಿದ್ದು, ಈ ಸಂಬಧ ‘ಜಿಐ ಟ್ಯಾಗ್’ ಮಾಡಿಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸಲಹೆ ಮಾಡಿದರು.
ಈ ಕುರಿತು ಪ್ರತಿಕ್ರಿಯಿಸಿದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಯೋಗೇಶ್ ಅವರು ಜೇನು ಕೃಷಿಕರು ಸಂಘಟನೆ ಮಾಡಿಕೊಂಡು ಕೂರ್ಗ್ ಹನಿ ಹೆಸರಿನಲ್ಲಿ ನೋಂದಣಿ ಮಾಡಬೇಕಿದ್ದು, ಈ ಬಗ್ಗೆ ಗಮನಹರಿಸಲಾಗುವುದು ಎಂದರು.
ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಬೇಕು, ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸ್ಪಷ್ಟ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಲಾಗಿದೆ. ಈ ಸಂಬAಧ ಸಮಸ್ಯೆ ಇರುವುದನ್ನು ಗಮನಿಸಿ ಅಗತ್ಯ ಕ್ರಮವಹಿಸಲಾಗಿದೆ ಎಂದು ತಿಳಿಸಿದರು. ಸರ್ಕಾರದ ಪ್ರಮುಖ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮೀ ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಈ ಕಾರ್ಯಕ್ರಮಗಳ ಶೇಕಡಾವಾರು ಅನುಷ್ಠಾನಕ್ಕೆ ಸೂಚಿಸಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ವಸತಿ ಯೋಜನೆಯ ಅನುಷ್ಠಾನ, ಜಲಜೀವನ್ ಮಿಷನ್, ಗ್ರಾಮೀಣ ಕುಡಿಯುವ ನೀರು, ರಸ್ತೆ ಮತ್ತಿತರ ಸಂಬAಧ ಹಲವು ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್ ಅವರು ಹಲವು ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.