ಸಮಗ್ರ ನ್ಯೂಸ್: ಕಾರ್ಕಳ ತಾಲೂಕಿನ ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಅವ್ಯವಹಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಕಾರ್ಕಳ ತಾಲ್ಲೂಕಿನ ಬೈಲೂರಿನ ಎರ್ಲಪಾಡಿ ಗ್ರಾಮದ ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದ್ದು, ಕೂಡಲೇ ಈ ಸಂಬಂಧ ಉನ್ನತ ಮಟ್ಟದ ತನಿಖೆಗೆ ಕೋರಿ ಸಿಎಂ ಸಿದ್ದರಾಮಯ್ಯಗೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪತ್ರ ಬರೆದಿದ್ದರು.
ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ, ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ಭಾರೀ ದೂರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಅವರು ಫೆ.2ರಂದು ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಅದರಂತೆ ಇದೀಗ ಮುಖ್ಯಮಂತ್ರಿ ಸಿಓಡಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ಬೆಟ್ಟದ ಮೇಲಿನ ಥೀಂ ಪಾರ್ಕ್‌ನಲ್ಲಿ ಸ್ಥಾಪಿಸಲಾಗಿದ್ದ ಬೃಹತ್ ಪರಶುರಾಮನ ಮೂರ್ತಿಗೆ ಕಂಚು ಮತ್ತು ಉಕ್ಕು ಬಳಸಲಾಗಿದೆ ಎಂದು ಹೇಳಲಾಗಿತ್ತು. ಆದರೆ ಕಾಂಗ್ರೆಸ್ ನಾಯಕರು ಈ ಪುತ್ಥಳಿಯನ್ನು ಫೈಬರ್‌ನಿಂದ ನಿರ್ಮಿಸಲಾಗಿದೆ ಎಂದು ಆರೋಪಿಸಿದ್ದಾರೆ. ಈ ಥೀಂ ಪಾರ್ಕ್ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದ ಸ್ಥಳೀಯ ಶಾಸಕ ಸುನಿಲ್ ಕುಮಾರ್ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.