ಸಮಗ್ರ ನ್ಯೂಸ್: ಕೊಪ್ಪಳದ ಕುಷ್ಟಗಿ ತಾಲೂಕಿನ ನೆರೆಬೆಂಚಿ ಗ್ರಾಮದಲ್ಲಿ ವೈರಲ್ ಫೀವರ್ ಕಾಟ ಜೋರಾಗಿದ್ದು, ವ್ಯಾಪಕವಾಗಿ ಹರಡಿದೆ, ಜ್ವರ ಮತ್ತು ಮೈಕೈ ನೋವಿನಿಂದ ಜನರು ನರಳಾಡುತ್ತಿದ್ದಾರೆ. ಸ್ಥಳಕ್ಕೆ ಕುಷ್ಟಗಿ ತಹಶೀಲ್ದಾರ್ ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದ ದೇವಸ್ಥಾನದಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಎಲ್ಲಾ ರೋಗಿಗಳನ್ನು ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸುತ್ತೇವೆ ಎಂದು ತಹಶೀಲ್ದಾರ್ ಹೇಳಿದ್ದಾರೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ತಂಗಡಿ, ಕುಷ್ಟಗಿ ತಾಲೂಕಿನ ನೆರೆಬೆಂಚಿ ಗ್ರಾಮಕ್ಕೆ ಭೇಟಿ ಕೊಡಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚನೆ ನೀಡಿದ್ದೇನೆ. ರೋಗಿಗಳಿಗೆ ದೇವಸ್ಥಾನದಲ್ಲಿ ಚಿಕಿತ್ಸೆ ಕೊಡುತ್ತಿದ್ದರೆ ಅವರನ್ನ ತಾಲೂಕು ಆಸ್ಪತ್ರೆಗೆ ಸೇರಿಸಲು ವ್ಯವಸ್ಥೆ ಮಾಡುತ್ತೇನೆ ಎಂದರು
ಗ್ರಾಮದಲ್ಲಿ ಜ್ವರ ಮತ್ತು ಮೈಕೈ ನೋವು ಉಲ್ಬಣಗೊಂಡಿದ್ದು, ಜ್ವರದಿಂದ ಬಳಲುತ್ತಿದ್ದವರನ್ನು ಕುಷ್ಟಗಿ ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಕಳೆದ ಮೂರು ದಿನಗಳಿಂದ ಗ್ರಾಮದ ದೇವಸ್ಥಾನದಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ನಂತರ ಗ್ರಾಮಕ್ಕೆ ಆಗಮಿಸಿದ್ದ ಅಧಿಕಾರಿಗಳು, ರೋಗಿಗಳನ್ನು ಸ್ಥಳಾಂತರಿಸಿದ್ದಾರೆ