ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಅತಿವೇಗದ ಟ್ರ್ಯಾಕ್ಟರ್ ಟ್ರಾಲಿಯು ನಿಯಂತ್ರಣ ಕಳೆದುಕೊಂಡು ಕೊಳಕ್ಕೆ ಉರುಳಿ ಬಿದ್ದು ಏಳು ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 22 ಜನರು ಸಾವಿಗೀಡಾಗಿದ್ದಾರೆ.
ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಲು ಭಕ್ತರನ್ನು ಕದರಗಂಜ್ ಘಾಟ್‌ಗೆ ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿದೆ. ಈ ಘಟನೆಯು ಪಟಿಯಾಲಿ ಕೊಟ್ವಾಲಿ ಪ್ರದೇಶದ ದರಿಯಾವ್‌ಗಂಜ್ ನಲ್ಲಿ ನಡೆದಿದೆ. ಈ ಘಟನೆಯಲ್ಲಿ ಸುಮಾರು 20 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಬಗ್ಗೆ ನಮಗೆ ಮಾಹಿತಿ ದೊರೆತ ತಕ್ಷಣ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದೆ. ನಮ್ಮ ತಂಡ, ಸ್ಥಳೀಯರ ಜೊತೆಗೂಡಿ ಸಾಧ್ಯವಾದಷ್ಟು ಜನರನ್ನು ರಕ್ಷಿಸಲು ವೇಗವಾಗಿ ಕೆಲಸ ಮಾಡಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಕಾಸ್‌ಗುಂಜ್ ಎಸ್‌ಪಿ ಅಪರ್ಣಾ ರಜತ್ ಕೌಶಿಕ್ ಹೇಳಿದ್ದಾರೆ.
ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಹೇಳಿದ್ದಾರೆ.