ಸಮಗ್ರ ನ್ಯೂಸ್: ಬಿಜೆಪಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಿನ್ನೆ ಬಿಡುಗಡೆಗೊಳಿಸಿದೆ. ಅದರಲ್ಲಿ ಮೈಸೂರು-ಕೊಡಗು ಕ್ಷೇತ್ರ ನೂತನ ಅಭ್ಯರ್ಥಿಯಾಗಿ ಯದುವೀರ್ಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಟಿಕೆಟ್ ಸಿಕ್ಕ ಸಂತೋಷದಲ್ಲಿ ಮೈಸೂರು ಕೊಡಗು ಕ್ಷೇತ್ರದ ಜನರಿಗೆ ಯದುವೀರ್ ಪತ್ರ ಬರೆದಿದ್ದಾರೆ.
“ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರಗಳು. ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ. ಕಳೆದ ಒಂಭತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗೂ ನಮ್ಮ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದು, ಅನೇಕ ಪ್ರಜಾಬಾಂಧವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದ್ದು, ನನ್ನನ್ನು ನೀವೆಲ್ಲರೂ ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ, ಈಗ ಆ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ.
ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದದಿಂದ ಮೈಸೂರು ಮತ್ತು ಕೊಡಗಿನ ಸರ್ವಾಂಗೀಣ ಏಳಿಗೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು ನಾನು ಆಶಿಸುತ್ತಿದ್ದೇನೆ, ಹಾಗೂ ಮೈಸೂರು-ಕೊಡಗಿನ ಜನರ ಶುಭ ಹಾರೈಕೆ ಮತ್ತು ಬೆಂಬಲವನ್ನು ಎದುರು ನೋಡುತ್ತಿದ್ದೇನೆ. ಚುನಾವಣೆಯಲ್ಲಿ ಪಕ್ಷವನ್ನು ಪ್ರತಿನಿಧಿಸಲು ನನ್ನ ಮೇಲೆ ನಂಬಿಕೆ ಇಟ್ಟಿರುವ ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೂ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ. ನಡ್ಡಾ ಅವರಿಗೂ, ಗೃಹಮಂತ್ರಿಗಳಾದ ಶ್ರೀ ಅಮಿತ್ ಷಾ ಅವರಿಗೂ, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಶ್ರೀ ಬಿ.ಎಲ್ ಸಂತೋಷ್ ಅವರಿಗೂ ಹಾಗೂ ವಿಶೇಷವಾಗಿ ಬಿಜೆಪಿ ಪಕ್ಷದ ಆತ್ಮ ಜೀವವಾಗಿರುವ ಕಾರ್ಯಕರ್ತರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ.
ಎರಡು ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ್ದಕ್ಕಾಗಿ ನಾನು ಶ್ರೀ ಪ್ರತಾಪ್ ಸಿಂಹ ಅವರನ್ನು ಅಭಿನಂದಿಸುತ್ತೇನೆ. ಈ ಕ್ಷೇತ್ರದ ಅಭಿವೃದ್ಧಿಗೆ ಅವರ ಬದ್ಧತೆ ನಮ್ಮೆಲ್ಲರ ಭವಿಷ್ಯದ ಆಕಾಂಕ್ಷಿಗಳಿಗೆ ಭದ್ರ ಅಡಿಪಾಯ ಹಾಕಿ ಕೊಟ್ಟಿದೆ. ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯ ಆಶಿರ್ವಾದಾನುಗ್ರಹಗಳು ನಮ್ಮೆಲ್ಲರ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೆನೆ” ಎಂದು ಪತ್ರದ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ.
ಯದುವೀರ್ ಗೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಒಡೆಯರ್ ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದು, ಮಾ.16ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯ ನಾಯಕರ ಸಮ್ಮುಖದಲ್ಲಿ ಒಡೆಯರ್ ಪಕ್ಷ ಸೇರಲಿದ್ದಾರೆ.
https://www.facebook.com/share/p/veXnBA6d6VuMshm7/?mibextid=oFDknk