ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಬರ ಪರಿಹಾರ ಪಡೆಯುವ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಆರಂಭಿಸಿದೆ.
ರಾಜ್ಯದ 223 ತಾಲೂಕುಗಳಲ್ಲಿ ಎದುರಾಗಿರುವ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಯಂತೆ 18,171 ಕೋಟಿ ರು. ಗಳ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಸುಪ್ರೀಂಕೋರ್ಟ್‍ಗೆ ಶನಿವಾರ ರಿಟ್ ಅರ್ಜಿ ಸಲ್ಲಿಸಲಾಗಿದೆ.
ಕೇಂದ್ರ ಸರ್ಕಾರದಿಂದ ಪರಿಹಾರ ಮತ್ತು ಅನುದಾನಕ್ಕಾಗಿ ಈಗಾಗಲೇ ಹಲವು ಸಂದರ್ಭದಲ್ಲಿ ಹಲವು ರಾಜ್ಯಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿವೆ. ಆದರೆ, ಬರ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ರಾಜ್ಯ ಸರ್ಕಾರವೊಂದು ಸುಪ್ರೀಂಕೋರ್ಟ್‍ಗೆ ಹೋಗಿರುವುದು ಇದೇ ಮೊದಲು ಎನ್ನಲಾಗಿದೆ.
ಈ ಹಿಂದೆ ಜಿಎಸ್‍ಟಿ ಪರಿಹಾರಕ್ಕಾಗಿ ತಮಿಳುನಾಡು ಸರ್ಕಾರ, ಹೆಚ್ಚುವರಿ ಸಾಲ ಪಡೆಯಲು ಅನುಮತಿ ನೀಡದ ಕೇಂದ್ರ ಸರ್ಕಾರದ ವಿರುದ್ಧ ಕೇರಳ ಸರ್ಕಾರಗಳು ಸುಪ್ರೀಂಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದವು.
ಅಲ್ಲದೆ, ಕೇರಳ ಸರ್ಕಾರ ಅರ್ಜಿ ಸಲ್ಲಿಕೆ ವೇಳೆ ಕರ್ನಾಟಕ ಸರ್ಕಾರಕ್ಕೆ ಕೈಜೋಡಿಸುವಂತೆ ಕೋರಿತ್ತು. ಆದರೆ, ಕರ್ನಾಟಕ ಸರ್ಕಾರ ಅದಕ್ಕೆ ನಿರಾಕರಿಸಿತ್ತು.