ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಟಿಕೆಟ್ ಫೈಟ್ ಜೋರಾಗಿ ನಡೆದಿತ್ತು. ಕರ್ನಾಟಕದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಾಕಿ ಉಳಿದಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದು, ಕೋಲಾರ ಕ್ಷೇತ್ರದ ಟಿಕೆಟ್ ಕಗ್ಗಂಟಾಗಿ ಉಳಿದುಕೊಂಡಿತ್ತು. ಚಿಕ್ಕಬಳ್ಳಾಪುರ ಟಿಕೆಟ್ ಅನ್ನು ಎಂ.ಎಸ್.ರಾಮಯ್ಯನವರ ಮೊಮ್ಮಗ ರಕ್ಷಾ ರಾಮಯ್ಯ, ಬಳ್ಳಾರಿ ಲೋಕಸಭಾ ಟಿಕೆಟ್ ಸಂಡೂರು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ತುಕರಾಂ ಅವರಿಗೆ ನೀಡಿದ್ದು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಸಿದ್ದರಾಮಯ್ಯನವರ ಆಪ್ತ ಸಚಿವ ಡಾ.ಹೆಚ್ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ಗೆ ಮಣೆ ಹಾಕಲಾಗಿದೆ.
ಆದರೆ ಕೋಲಾರ ಟಿಕೆಟ್ ಮಾತ್ರ ಇಬ್ಬರ ಜಗಳ ಮೂರನೆಯವನಿಗೆ ಲಾಭ ಅನ್ನೊ ತರ ಆಗಿದೆ. ಹೌದು ಕಾಂಗ್ರೆಸ್ ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಮಾಜಿ ಮೇಯರ್ ವಿಜಯ್ ಕುಮಾರ್ ಅವರ ಪುತ್ರ ಕೆ.ವಿ. ಗೌತಮ್ ಅವರಿಗೆ ಕೋಲಾರ ಟಿಕೆಟ್ ನೀಡಲಾಗಿದೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮಾಜಿ ಸಭಾಪತಿ ರಮೇಶ್ ಕುಮಾರ್ ಮತ್ತು ಸಚಿವ ಕೆ.ಹೆಚ್ ಮುನಿಯಪ್ಪ ಎರಡೂ ಬಣದವರನ್ನು ಬಿಟ್ಟು ಮೂರನೇ ವ್ಯಕ್ತಿಗೆ ಮಣೆ ಹಾಕಿದೆ.
ಇನ್ನು ಕೋಲಾರ ಟಿಕೆಟ್ ಕಾಂಗ್ರೆಸ್ನಲ್ಲಿ ದೊಡ್ಡ ಕೋಲಾಹಲ ಎಬ್ಬಿಸಿದೆ. ಸಚಿವ ಕೆಎಚ್ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ನಡುವೆ ಟಿಕೆಟ್ಗಾಗಿ ಭಾರೀ ಪೈಪೋಟಿ ನಡೆದಿದೆ. ಇವರಿಬ್ಬರಲ್ಲಿ ಯಾರಿಗೆ ಟಿಕೆಟ್ ಘೋಷಣೆ ಆಗುತ್ತದೆ ಎಂಬುದು ಕುತೂಹಲಕಾರಿಯಾಗಿತ್ತು ಆದರೆ ಕೆ.ವಿ ಗೌತಮ್ ಹೆಸರನ್ನು ಹೈಕಮಾಂಡ್ ಘೋಷಣೆ ಮಾಡಿದೆ.