ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಕಲ್ಕತ್ತಾ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಇದೇ ವೇಳೆ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಬಂಗಾಳದಲ್ಲಿ ನೇಮಕಗೊಂಡ ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ 25,753 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ವಜಾಗೊಳಿಸಿ ಏಪ್ರಿಲ್ 22ರಂದು ಕಲ್ಕತ್ತಾ ಹೈಕೋರ್ಟ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದರು.ಜೊತೆಗೆ ನೇಮಕಾತಿ ಹಗರಣದ ಕುರಿತು ಸಿಬಿಐ ತನಿಖೆ ಮುಂದುವರಿಸಿ, ಪೂರ್ಣಗೊಳಿಸಬೇಕು. ಅಲ್ಲಿಯವರೆಗೆ ನೇಮಕಗೊಂಡವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ಸೂಚಿಸಿದರು.