ಸಮಗ್ರ ನ್ಯೂಸ್: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಮತ್ತು ಮೈಸೂರು, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಳೆಯು ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ.
ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.
ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಾಳಿ ವೇಗವು ಗಂಟೆಗೆ 40-50 ಕಿ.ಮೀ ಇರಲಿದೆ. ಹೀಗಾಗಿ ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.