ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನ ಎಲ್ಲಾ 4 ಕ್ಷೇತ್ರಗಳು ಬಿಜೆಪಿ ಪಾಲಾಗಿದೆ. ಇದು ರಾಜ್ಯದಲ್ಲಿರುವ ಕಾಂಗ್ರೆಸ್‌ಗೆ ದೊಡ್ಡ ಹಿನ್ನೆಡೆಯಾಗಿದ್ದು, ಕಾಂಗ್ರೆಸ್ ನೀಡಿದ್ದ ಗ್ಯಾರೆಂಟಿಗಳು ಲೋಕಸಭೆ ಚುನಾವಣೆಯಲ್ಲಿ ಕೈ ಹಿಡಿಯಲಿಲ್ಲ ಎನ್ನುವುದು ಫಲಿತಾಂಶದಿಂದ ಸ್ಪಷ್ಟವಾಗಿ ತಿಳಿದು ಬರುತ್ತದೆ.
ಬೆಂಗಳೂರು ಗ್ರಾಮಾಂತರದಲ್ಲಿ ಹಾಲಿ ಸಂಸದ, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ವಿರುದ್ಧ ಎನ್‌ಡಿಎ ಅಭ್ಯರ್ಥಿ ಡಾ.ಮಂಜುನಾಥ್ 2,68.094 ಮತಗಳ ಅಂತರದಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.
ಬೆಂಗಳೂರು ದಕ್ಷಿಣದಲ್ಲಿ ಎನ್‌ಡಿಎ ಅಭ್ಯರ್ಥಿ ತೇಜಸ್ವಿ ಸೂರ್ಯ, ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಸೌಮ್ಯ ರೆಡ್ಡಿ ವಿರುದ್ಧ 2,68,028 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಕ್ಷೇತ್ರದಲ್ಲಿ 7,27,537 ಮತಗಳು ತೇಜಸ್ವಿ ಸೂರ್ಯಗೆ ಬಿದ್ದಿದ್ದು, 4,59,460 ಮತಗಳನ್ನು ಸೌಮ್ಯ ರೆಡ್ಡಿ ಪಡೆದಿದ್ದಾರೆ. 7,617 ಮತಗಳು ನೋಟಾಕ್ಕೆ ಬಿದ್ದಿದೆ.
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಹಾಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಅಭ್ಯರ್ಥಿ ಪ್ರೋ.ರಾಜೀವ್ ಗೌಡ ಎದುರು 2,62,537 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಶೋಭಾ ಕರಂದ್ಲಾಜೆ ಪರವಾಗಿ 9,74,909 ಮತಗಳು ಚಲಾವಣೆಯಾಗಿದ್ದು, ರಾಜೀವ್ ಗೌಡಗೆ 7,12,372 ಮತಗಳು ಸಿಕ್ಕಿದೆ. ಕ್ಷೇತ್ರದಲ್ಲಿ 13,375 ಮತಗಳು ನೋಟಾ ಪರ ಚಲಾವಣೆಯಾಗಿದೆ.
ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ವಿರುದ್ಧ ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್ 27,899 ಮತಗಳಿಂದ ಗೆಲುವನ್ನು ಸಾಧಿಸಿದ್ದಾರೆ. ಆರಂಭದಿಂದ ಮುನ್ನಡೆಯನ್ನು ಕಾಯ್ದುಕೊಂಡ ಮನ್ಸೂರ್ ಅಲಿ ಖಾನ್ ಒಂದು ಹಂತದಲ್ಲಿ ಗೆಲುವನ್ನು ಸಾಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಕೊನೆಯ ವೇಳೆ ಚುನಾವಣೆ ಫಲಿತಾಂಶದ ಚಿತ್ರಣ ಬದಲಾಗಿದ್ದು ಪಿ.ಸಿ ಮೋಹನ್ ಗೆಲುವನ್ನು ಸಾಧಿಸಿದ್ದಾರೆ.