ಸಮಗ್ರ ನ್ಯೂಸ್: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ನಾಯಕ ನಟ ದರ್ಶನ ತೂಗುದೀಪ್ ಅರೆಸ್ಟ್ ಆಗಿದ್ದಾರೆ. ಮೈಸೂರಿನ ತಮ್ಮ ನಿವಾಸದಿಂದ ಪೊಲೀಸರು ಬಂಧಿಸಿದ್ದು, ಸದ್ಯ ಪೊಲೀಸ್ ವಶದಲ್ಲಿದ್ದಾರೆ.
ಮೂಲತಃ ಚಿತ್ರದುರ್ಗದ ಲಕ್ಷ್ಮೀ ವೆಂಕಟೇಶ್ವರ ಬಡಾವಣೆ ನಿವಾಸಿಯಾಗಿದ್ದ ರೇಣುಕಾಸ್ವಾಮಿ ಬೆಂಗಳೂರಿನ ಮೆಡಿಕಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಜೂ.8ರಂದು ಬೆಳಗ್ಗೆಯಿಂದ ಮನೆಯಿಂದ ಕೆಲಸಕ್ಕೆಂದು ಹೋಗಿದ್ದ ರೇಣುಕಾಸ್ವಾಮಿ ವಾಪಸ್ ಮನೆಗೆ ಬಂದಿರಲಿಲ್ಲ. ಈ ಬಗ್ಗೆ ಮನೆಯವರು ಪೊಲೀಸ್ ದೂರು ನೀಡಿದ್ದರು. ಈ ನಡುವೆ ಜೂ.9ರಂದು ಬೆಳಗ್ಗೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಮೋರಿಯೊಂದರಲ್ಲಿ ರೇಣುಕಾಸ್ವಾಮಿಯ ಮೃತದೇಹ ಪತ್ತೆಯಾಗಿತ್ತು.
ಈ ಬಗ್ಗೆ ತನಿಖೆ ನಡೆಸಿರುವ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ ಆರೋಪದಲ್ಲಿ ನಟ ದರ್ಶನ್ ಸಹಿತ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದ್ದು, ರೇಣುಕಾ ಸ್ವಾಮಿ ಪವಿತ್ರಗೌಡಗೆ ಕೆಟ್ಟದಾಗಿ ಮೆಸೇಜ್ ಹಾಕಿದ್ದರು. ಹಾಗೂ ಅಶ್ಲೀಲವಾಗಿ ಸಂದೇಶ, ಫೋಟೋ ಕಳುಹಿಸಿದ್ದರು ಎನ್ನಲಾಗಿದೆ. ಆದ್ದರಿಂದ ನಟ ದರ್ಶನ್ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಲು ಸೂಚನೆ ನೀಡಿದ್ದರು ಎನ್ನಲಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾ ಸ್ವಾಮಿ ಅವರನ್ನು ಕೊಲೆ ಮಾಡಲಾಗಿತ್ತು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.