ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಎಂಬ ಕಾಲೇಜು ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಆದರೆ ಅಧಿಕಾರಿಗಳು ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಲವ್ ಜಿಹಾದ್ ಕುರಿತು ಎಲ್ಲಿಯೂ ಉಲ್ಲೇಖವಾಗಿಲ್ಲ.
ನೇಹಾ ಹಿರೇಮಠ ಹತ್ಯೆಗೆ ಆರೋಪಿಯ ಹತಾಶೆಯೇ ಕಾರಣ ಎಂದು ಸಿಐಟಿ ಪೊಲೀಸರು ಕೋರ್ಟ್ಗೆ ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ. ಇದೇ ವೇಳೆ, ಲವ್ ಜಿಹಾದ್ ಕುರಿತ ಯಾವುದೇ ವಿಚಾರಗಳನ್ನು ನಮೂದಿಸಿಲ್ಲ. ಒಟ್ಟು 483 ಪುಟಗಳ ಚಾರ್ಜ್ಶೀಟ್ ಸಲ್ಲಿಸಲಾಗಿದೆ.ಆರೋಪಿ ಫಯಾಜ್ ವಿರುದ್ಧ ಐಪಿಸಿ ಕಲಂ 302 (ಮರಣದಂಡನೆ ಇಲ್ಲವೇ ಜೀವಾವಧಿ ಶಿಕ್ಷೆ), 341(ಒಂದು ತಿಂಗಳ ಜೈಲು ಶಿಕ್ಷೆ) ಹಾಗೂ 506 (ಜೀವ ಬೆದರಿಕೆಗಾಗಿ 7 ವರ್ಷಗಳ ಜೈಲು ಶಿಕ್ಷೆ) ಅಡಿಯಲ್ಲಿ ದೋಷಾರೋಪ ಹೊರಿಸಲಾಗಿದೆ.
ನೇಹಾಳ ತಂದೆ, ತಾಯಿ, ಸಹೋದರ, ಸಹಪಾಠಿಗಳು, ಗೆಳತಿಯರು, ಬಿವಿಬಿ ಕಾಲೇಜಿನ ಉಪನ್ಯಾಸಕರು ಸೇರಿದಂತೆ ಒಟ್ಟು 99 ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಪ್ರತ್ಯಕ್ಷ ಸಾಕ್ಷಿಗಳು, ಸಿಸಿಟಿವಿ ದೃಶ್ಯಾವಳಿಗಳು, ದಾಖಲೆಗಳು, ಮರಣೋತ್ತರ ಶವ ಪರೀಕ್ಷೆ ಕೈಗೊಂಡ ವೈದ್ಯರು ಹಾಗೂ ತಜ್ಞರ (ಫೊರೆನ್ಸಿಕ್) ವರದಿಗಳೂ ಅಡಕವಾಗಿವೆ.