ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪತ್ನಿ ಮಂಜುಳಾರನ್ನು ವಶಕ್ಕೆ ಪಡೆದಿದ್ದಾರೆ.
ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜುಲೈ 10ರಂದು ಮಾಜಿ ಸಚಿವ ನಾಗೇಂದ್ರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಬಸನ್ಗೌಡ ದದ್ದಲ್ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಹೆಚ್ಚಿನ ವಿಚಾರಣೆಯ ಅಗತ್ಯವಿರುವ ಕಾರಣ ಅಧಿಕಾರಿಗಳು ಆರೋಪಿಗಳ ಹೇಳಿಕೆ ಆಧರಿಸಿ ಈ ಕ್ರಮ ಕೈಗೊಂಡಿದ್ದಾರೆ. ಮಂಜುಳಾರನ್ನು ಡಾಲರ್ಸ್ ಕಾಲೋನಿ ನಿವಾಸದಲ್ಲಿ ವಶಕ್ಕೆ ಪಡೆದ ನಂತರ ಅವರನ್ನು ಅಧಿಕಾರಿಗಳು ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೆಲ ದಿನಗಳ ಹಿಂದಷ್ಟೇ ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರರನ್ನು ಅರೆಸ್ಟ್ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅವರ ಪತ್ನಿಯನ್ನು ವಶಕ್ಕೆ ಪಡೆದಿದ್ದಾರೆ.