ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂಗಾರು ಮಳೆ ಮುಂದುವರಿದಿದ್ದು ಹಲವು ಅನಾಹುತಗಳು ಸೃಷ್ಟಿಯಾಗುತ್ತಿವೆ. ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.27ರಂದು ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಎನ್.ಆರ್. ಪುರ, ಕೊಪ್ಪ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿಪೂರ್ವ, ಪದವಿ ಕಾಲೇಜುಗಳಿಗೆ ಜು.27ರಂದು ರಜೆ ಘೋಷಣೆ ಮಾಡಲಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು ಇಂದು ಶಾಲಾ ಕಾಲೇಜುಗಳಿಗೆ ರಜೆ ನೀಡಿದೆ. ಧಾರವಾಡ ಜಿಲ್ಲೆಯಲ್ಲಿ ಮಕ್ಕಳಸುರಕ್ಷತೆ ದೃಷ್ಟಿಯಿಂದ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಜಿಲ್ಲೆಯ 10 ತಾಲೂಕಿನ ಶಾಲೆ, ಕಾಲೇಜಿಗೆ ಜು.27 ರಂದು ರಜೆ ನೀಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೆಲಿ, ಜೋಯಿಡಾ, ಹಲಿಯಾಳ ಮತ್ತು ಯಲ್ಲಾಪುರ ತಾಲೂಕಿನ ಶಾಲಾ ಕಾಲೇಜ್ಗೆ ರಜೆ ನೀಡಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತು ಪಡಿಸಿ ಉಳಿದಂತೆ ಎಲ್ಲಾ ಅಂಗನವಾಡಿ ಮತ್ತು ಶಾಲಾ, ಕಾಲೇಜುಗಳಿಗೆ(ಪಿಯುಸಿ) ಜು.27ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.