ಸಮಗ್ರ ನ್ಯೂಸ್: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್ ಸ್ಫೋಟಗೊಂಡು 14 ಮಂದಿ ಕಾರ್ಮಿಕರು ಸಾವನ್ನಪ್ಪಿ, ಸುಮಾರು 20 ಕಾರ್ಮಿಕರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ಅನಕಪಲ್ಲಿಯಲ್ಲಿ ನಡೆದಿದೆ.
ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ ಸ್ಫೋಟ ಸಂಭವಿಸಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಎನ್‌ಟಿಆರ್ ಆಸ್ಪತ್ರೆಗೆ ರವಾನಿಸಲಾಗಿದೆ. ಮಧ್ಯಾಹ್ನ ವೇಳೆ ಸ್ಫೋಟ ಸಂಭವಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ.
ಕಾರ್ಖಾನೆಯಲ್ಲಿ ನಡೆದ ಸ್ಫೋಟದಿಂದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದಟ್ಟ ಹೊಗೆ ಆವರಿಸಿದೆ. ಘಟನೆ ಕುರಿತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಮತ್ತು ರಕ್ಷಣಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಇನ್ನೂ ಅವಘಡ ಸಂಭವಿಸಿದ ವೇಳೆ ಕರ್ಖಾನೆ ಘಟಕದಲ್ಲೇ ಸಿಲುಕಿದ್ದ 13 ಮಂದಿಯನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ ಸುಮಾರು 1,000ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಅತಿದೊಡ್ಡ ಫಾರ್ಮಾ ಕಂಪನಿಗಳಲ್ಲಿ ಇದು ಸಹ ಒಂದಾಗಿದೆ ಎಂದು ವರದಿಯಾಗಿದೆ.
ಇನ್ನೂ ಘಟನೆ ಬಳಿಕ ಕಾರ್ಖಾನೆ ಮುಂದೆ ಜಮಾಯಿಸಿದ ಕಾರ್ಮಿಕರು ಮೃತ ಸಂತ್ರಸ್ತರ ಕುಟುಂಬಗಳಿಗೆ ಹಾಗೂ ಗಾಯಗೊಂಡವರಿಗೆ ಪರಿಹಾರ ನೀಡಬೇಕು ಹಾಗೂ ರಿಯಾಕ್ಟರ್ ಸ್ಫೋಟಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ.