ಸಮಗ್ರ ನ್ಯೂಸ್: 14 ವರ್ಷಗಳಿಂದ ಬಳ್ಳಾರಿಯಿಂದ ದೂರವಾಗಿದ್ದ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಳ್ಳಾರಿ ಸೇರಿದಂತೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕಡಪ ಜಿಲ್ಲೆಗಳ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವು ಮಾಡಿದೆ.
ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆ ತವರು ಜಿಲ್ಲೆಯ ಪ್ರವೇಶವಿಲ್ಲದೆ ವನವಾಸ ಅನುಭವಿಸಿದ್ದ ಮಾಜಿ ಸಚಿವ, ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಕೊನೆಗೂ ಅನುಮತಿ ನೀಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಜನಾರ್ದನ ರೆಡ್ಡಿಗೆ ಜಾಮೀನು ನೀಡುವಾಗ ಕೋರ್ಟ್ ಬಳ್ಳಾರಿಗೆ ಭೇಟಿ ನೀಡದಂತೆ ನಿರ್ಬಂಧ ಹೇರಿತ್ತು. ಆದ್ದರಿಂದ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ ಮತ್ತು ಬೆಂಗಳೂರಿನ ‘ಪಾರಿಜಾತ’ ನಿವಾಸದಲ್ಲಿಯೇ ವಾಸ್ತವ್ಯ ಹೂಡಿದ್ದರು. ಜನಾರ್ದನ ರೆಡ್ಡಿ ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್ ಬಳ್ಳಾರಿಗೆ ಭೇಟಿ ನೀಡದಂತೆ ಹಾಕಿದ್ದ ಷರತ್ತುಗಳನ್ನು ಸಡಿಲಿಸಿದೆ. ಆದ್ದರಿಂದ ಅವರು ಇನ್ನು ಮುಂದೆ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಬಹುದು. ಅಲ್ಲಿರುವ ತಮ್ಮ ಐಷಾರಾಮಿ ನಿವಾಸದಲ್ಲಿ ವಾಸ್ತವ್ಯವನ್ನು ಹೂಡಬಹುದು.
ವಿಚಾರ ತಿಳಿಯುತ್ತಿದ್ದಂತೆಯೇ ಜನಾರ್ದನ ರೆಡ್ಡಿ ಬೆಂಬಲಿಗರು ಕೇಕ್ ಕತ್ತರಿಸಿ ಹರ್ಷೋದ್ಗಾರ ಮಾಡಿದರು.