ಸಮಗ್ರ ನ್ಯೂಸ್: ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಮತ್ತು ಪಂಚಾಯಿತಿ ಅಧಿಕಾರಿಗಳು ಹಾಗೂ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು ಜೊತೆಗೂಡಿ ಶುಕ್ರವಾರದಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದಾರೆ. ಇದರಿಂದಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳು ಸ್ತಬ್ಧವಾಗಲಿವೆ.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ಕಾರ್ಯದರ್ಶಿಗಳು, ಕರ ವಸೂಲಿಗಾರರು, ಗುಮಾಸ್ತರು ಮತ್ತು ಡಾಟಾ ಎಂಟ್ರಿ ಆಪರೇಟರ್‌ಗಳು, ನೀರಗಂಟಿಗಳು, ಜವಾನರು, ಸ್ವಚ್ಛತಾ ಕೆಲಸಗಾರರು, ದ್ವಿತೀಯ ದರ್ಜೆ ಸಹಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗೆಜೆಟೆಡ್ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುವ ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು ಗುರುವಾರವೇ ರಾಜ್ಯ ರಾಜಧಾನಿಯತ್ತ ಹೊರಟಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ಪಿಡಿಒ ಹುದ್ದೆಗಳನ್ನು ‘ಬಿ’ ಗುಂಪಿನ ಹುದ್ದೆಗಳಾಗಿ ಉನ್ನತೀಕರಿಸುವುದು, ಜ್ಯೇಷ್ಠತಾ ಪಟ್ಟಿ ಅಂತಿಮಗೊಳಿಸುವುದು, ವಿವಿಧ ವೃಂದಗಳ ನೌಕರರಿಗೆ ಸಕಾಲಕ್ಕೆ ಬಡ್ತಿ ನೀಡುವುದು, ಕಾರ್ಮಿಕರ ರಾಜ್ಯ ವಿಮೆ ಮತ್ತು ಭವಿಷ್ಯ ನಿಧಿ ನೀಡುವುದು, ನೇರ ನೇಮಕಾತಿಯಲ್ಲಿ ಆದ್ಯತೆ ನೀಡುವುದು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಹುದ್ದೆಗಳಲ್ಲಿ ಪಂಚಾಯತ್ ರಾಜ್ ಇಲಾಖೆಯ ಗೆಜೆಟೆಡ್ ಅಧಿಕಾರಿಗಳಿಗೆ ಮೀಸಲು ನೀಡಬೇಕೆಂಬ ಬೇಡಿಕೆಗಳನ್ನು ಅಧಿಕಾರಿಗಳು ಮತ್ತು ನೌಕರರು ಮುಂದಿಟ್ಟಿದ್ದಾರೆ.