ಸಮಗ್ರ ನ್ಯೂಸ್: ಜಮ್ಮುಮತ್ತು ಕಾಶ್ಮೀರ ವಿಧಾನಸಭೆಗೆ ಇತ್ತೀಚೆಗೆ ಚುನಾವಣೆ ನಡೆದಿರುವ ಹಿನ್ನೆಲೆಯಲ್ಲಿ ಆರು ವರ್ಷಗಳ ಹಿಂದೆ ಈ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಿಸಲಾಗಿದ್ದ ರಾಷ್ಟ್ರಪತಿ ಆಡಳಿತವನ್ನು ಕೊನೆಗೊಳಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ನೂತನ ಸರ್ಕಾರ ರಚನೆಗೆ ದಾರಿ ಮಾಡಿಕೊಟ್ಟಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ, 2019ರ ಸೆಕ್ಷನ್ 73 (2019 ರ 34) ಮತ್ತು ಭಾರತದ ಸಂವಿಧಾನದ 239 ಮತ್ತು 239 ಎ ವಿಧಿಗಳ ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಲು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆಯ ಸೆಕ್ಷನ್ 54 ರ ಅಡಿಯಲ್ಲಿ ಮುಖ್ಯಮಂತ್ರಿಯನ್ನು ನೇಮಕ ಮಾಡುವ ಮೊದಲು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ 2019 ರ ಅಕ್ಟೋಬರ್ 31 ರ ಆದೇಶವನ್ನು ಹಿಂತೆಗೆದುಕೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಆಗಸ್ಟ್ 5, 2019 ರಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂದು ಎರಡು ಭಾಗಗಳಾಗಿ ವಿಂಗಡಿಸಿತ್ತು. ಈ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯನ್ನು ರದ್ದುಪಡಿಸಿತ್ತು.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು ಕ್ಲೀನ್ ಸ್ವೀಪ್ ಮಾಡಿದೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಅವರು ತಮ್ಮ ಪುತ್ರ ಒಮರ್ ಅಬ್ದುಲ್ಲಾ ಅವರನ್ನು ಕಣಿವೆ ರಾಜ್ಯದ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿದ್ದಾರೆ.
ಈ ಬಾರಿ ಕಾಂಗ್ರೆಸ್ ಮತ್ತು ಎನ್‌ಸಿ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿತ್ತು. ಇಂದು ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಎನ್‌ಸಿ ಅಭೂತಪೂರ್ವ ಗೆಲುವು ಸಾಧಿಸಿದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಮತ್ತು ಎನ್‌ಸಿ ಮೈತ್ರಿ ಸರ್ಕಾರ ರಚಿಸಲಿದ್ದು, ಓಮರ್ ಅಬ್ದುಲ್ಲಾ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.