ಸಮಗ್ರ ನ್ಯೂಸ್: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಸ್ಐಟಿ ಎಡಿಜಿಪಿ ಎಂ. ಚಂದ್ರಶೇಖರ್ ನೀಡಿರುವ ದೂರಿನ ಅನ್ವಯ ಬೆಂಗಳೂರಿನ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.
ಬೆದರಿಕೆ ಹಾಗೂ ಸುಳ್ಳು ಆರೋಪಕ್ಕೆ ಸಂಬಂಧಿಸಿ ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ಅವರು ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸುರೇಶ್ ಬಾಬು ವಿರುದ್ಧ ತಿಂಗಳ ಹಿಂದೆ ಸಂಜಯ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಆದೇಶದಂತೆ ಸಂಜಯ ನಗರ ಠಾಣೆಯಲ್ಲಿ ಕುಮಾರಸ್ವಾಮಿ ಸೇರಿದಂತೆ ಈ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ತಾನು ಕುಮಾರಸ್ವಾಮಿ ವಿರುದ್ಧ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 16/2014 ಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಾಕ್ಷ್ಯಾಧಾರಗಳು ಲಭ್ಯವಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯಪಾಲರ ಅನುಮತಿ ಕೋರಿದ್ದೆ. ಈ ಹಿನ್ನೆಲೆಯಲ್ಲಿ ಸೆ.28 ಹಾಗೂ ಸೆ.29ರಂದು ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ತನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಪೊಲೀಸ್ ದೂರಿನಲ್ಲಿ ಉಲ್ಲೇಖಿಸಿದ್ದರು.
ತನ್ನನ್ನು ಕರ್ನಾಟಕ ಕೇಡರ್ ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಮೌಖಿಕ ಬೆದರಿಕೆ ಹಾಕಿದ್ದಾರೆ ಹಾಗೂ ತಾನು ಬೌರಿಂಗ್ ಆಸ್ಪತ್ರೆಯಿಂದ ಸುಳ್ಳು ವೈದ್ಯಕೀಯ ದಾಖಲಾತಿಯನ್ನು ಪಡೆದು ಕರ್ನಾಟಕ ಕೇಡರ್ ನಲ್ಲಿ ಮುಂದುವರೆಯುತ್ತಿರುವುದಾಗಿಯೂ ಆರೋಪ ಮಾಡಿದ್ದಾರೆ ಎಂದು ಎಡಿಜಿಪಿ ಚಂದ್ರಶೇಖರ್ ದೂರಿನಲ್ಲಿ ಆರೋಪಿಸಿದ್ದರು.
ಈ ದೂರಿಗೆ ಸಂಬಂಧಿಸಿ ಕೇಂದ್ರ ಸಚಿವರ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯದ ಅನುಮತಿ ಕೋರಲಾಗಿತ್ತು. ಇದೀಗ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ. ಅದರಂತೆ ಸಂಜಯ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಫ್.ಐ.ಆರ್.ನಲ್ಲಿ ಕುಮಾರಸ್ವಾಮಿ ಎ1, ನಿಖಿಲ್ ಎ2 ಹಾಗೂ ಸುರೇಶ್ ಬಾಬು ಎ3 ಆರೋಪಿ ಎಂದು ಉಲ್ಲೇಖಿಸಲಾಗಿದೆ.