ಸಮಗ್ರ ನ್ಯೂಸ್: ತೆಂಕು ತಿಟ್ಟು ಯಕ್ಷಗಾನದ ಯಕ್ಷಗಾನದ ಮೊದಲ ವೃತ್ತಿಪರ ಮಹಿಳಾ ಭಾಗವತರಾದ ಲೀಲಾವತಿ ಬೈಪಾಡಿತ್ತಾಯರು ಶನಿವಾರ(ಡಿ.14) ಸಂಜೆ ನಿಧನರಾದರು. ಅವರು ಪತಿ, ಖ್ಯಾತ ಹಿಮ್ಮೇಳ ವಾದಕ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಪುತ್ರ ಪತ್ರಕರ್ತ, ಹವ್ಯಾಸಿ ಕಲಾವಿದ ಅವಿನಾಶ ಬೈಪಾಡಿತ್ತಾಯ ಸೇರಿದಂತೆ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಲೀಲಾವತಿ ಬೈಪಾಡಿತ್ತಾಯರು ಸರಿ ಸುಮಾರು ನಾಲ್ಕು ದಶಕಗಳ ಕಾಲ ತಮ್ಮ ಕಂಠಸಿರಿಯಿಂದ ಮನೆಮಾತಾದವರು. ಸಾಮಾಜಿಕ ಪ್ರೋತ್ಸಾಹವಾಗಲೀ, ಮಾಧ್ಯಮಗಳ ಪ್ರಚಾರವಾಗಲೀ ಇಲ್ಲದ ಕಾಲದಲ್ಲೇ ಅವರು ಬೆಳೆದ ಬಗೆ ಅದ್ಭುತ.
ಲೀಲಾವತಿ ಬೈಪಾಡಿತ್ತಾಯರ ಅವರ ಕಲಾ ತಪಸ್ಸನ್ನು ರಾಜ್ಯ ಸರಕಾರ ಗುರುತಿಸಿ 2010ನೇ ಕರ್ನಾಟಕದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು. 2012ರಲ್ಲಿ ಕರ್ನಾಟಕ ಸರಕಾರ ಕೊಡಮಾಡಿದ ಸಾಧಕ ಹಿರಿಯ ನಾಗರಿಕರು ಪ್ರಶಸ್ತಿ, 2023ರಲ್ಲಿ ರಾಜ್ಯ ಸರಕಾರ ರಾಜ್ಯೋತ್ಸವ ಪ್ರಶಸ್ತಿ. ಆಳ್ವಾಸ್ ನುಡಿಸಿರಿ, ಉಳ್ಳಾಲ ಅಬ್ಬಕ್ಕ ಪ್ರಶಸ್ತಿ ಸೇರಿದಂತೆ ನೂರಾರು ಸನ್ಮಾನವನ್ನು ಪಡೆದಿದ್ದಾರೆ.
ಬಡತನದಿಂದಾಗಿ ಓದು ಬರಹ ಇರಲಿಲ್ಲ. ಶಾಲೆಗೆ ಹೋಗದೆಯೇ, ಅಣ್ಣನಿಂದ, ಅಕ್ಕ ಪಕ್ಕದವರಿಂದಲೋ ಅಕ್ಷರಾಭ್ಯಾಸ ಮಾಡಿಸಿಕೊಂಡಿದ್ದರು. ಹಿಂದಿ ವಿಶಾರದ ಕೂಡ ಆಗಿದ್ದರು. ಸಂಗೀತ ಕಲಿತಿದ್ದ ಅವರನ್ನು ತೆಂಕುತಿಟ್ಟಿನ ಅಗ್ರಮಾನ್ಯ ಹಿಮ್ಮೇಳ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯರು ಕೈಹಿಡಿದ ಬಳಿಕ, ಯಕ್ಷಗಾನ ಕಲಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪರಿಸರ ಅವರ ಯಕ್ಷಗಾನ ಕಲಿಕೆಗೆ ಪೂರಕವಾಗಿತ್ತು. ಮನೆ ಮನೆಯಲ್ಲೂ ವಿಶೇಷ ಕಾರ್ಯಕ್ರಮವಿದ್ದರೆ ಅಲ್ಲೊಂದು ತಾಳಮದ್ದಳೆ ಕೂಟ ಇದ್ದೇ ಇರುತ್ತಿತ್ತು. ಹೀಗೆ ಕಲಿಯುತ್ತಲೇ, ಹೆಣ್ಣು ಮಕ್ಕಳಿಗೆ ಯಕ್ಷಗಾನ ನೋಡುವುದಕ್ಕೂ ಅವಕಾಶವಿಲ್ಲದ ಸಂಪ್ರದಾಯವಿದ್ದ ಆ ಕಾಲದಲ್ಲಿ ತೆಂಕು ತಿಟ್ಟಿನ ಅಗ್ರಮಾನ್ಯ ಭಾಗವತರಲ್ಲೊಬ್ಬರಾಗಿ ಅವರು ಬೆಳೆದರು.ಮೊದಲ ಹಾಗೂ ಏಕೈಕ ವೃತ್ತಿಪರ ಮಹಿಳಾ ಭಾಗವತರಾಗಿ ಗುರುತಿಸಲ್ಟಟ್ಟಿದ್ದರು.
ಪತಿಯೊಂದಿಗೆ ಅಂದಿನ ಸುಬ್ರಹ್ಮಣ್ಯ, ಪುತ್ತೂರು, ಕದ್ರಿ, ಕರ್ನಾಟಕ, ಅರುವ (ಅಳದಂಗಡಿ), ಕುಂಬಳೆ ಬಪ್ಪನಾಡು ಮೇಳ, ಕುಂಬಳೆ, ತಲಕಳ ಮುಂತಾದ ಡೇರೆ-ಬಯಲಾಟ ಮೇಳಗಳಲ್ಲಿ ನಿರಂತರ ಇಪ್ಪತ್ತು ವರ್ಷಗಳ ಕಾಲ ವೃತ್ತಿ ಕಲಾವಿದರಾಗಿಯೂ 17ಕ್ಕೂ ಹೆಚ್ಚು ವರ್ಷಗಳಿಂದ ಅತಿಥಿ ಕಲಾವಿದರಾಗಿಯೂ ಯಕ್ಷಗಾನಕ್ಕೆ ಸೇವೆ ಸಲ್ಲಿಸಿದ್ದಾರೆ.
ತನ್ನ ಬಜಪೆ ತಲಕಳದ ಮನೆಯಲ್ಲಿ, ಕಟೀಲು ಮೊದಲಾದೆಡೆ ಯಕ್ಷಗಾನ ಭಾಗವತಿಕೆಯ ತರಗತಿಗಳನ್ನೂ ನಡೆಸಿ ನೂರಾರು ಮಂದಿಗೆ ಗುರುಗಳೂ ಆಗಿದ್ದರು. ಭಾನುವಾರ ಬೆಳಿಗ್ಗೆ ಅಂತ್ಯ ಸಂಸ್ಕಾರ ನಡೆಯಲಿದೆ.