ಸಮಗ್ರ ನ್ಯೂಸ್ : ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಡಿ.18 ರಂದು ಸಂಸತ್ತಿನ ಕಚೇರಿಯಲ್ಲಿ ಭೇಟಿಯಾಗಿದ್ದಾರೆ.
ಡಾ. ಬಿ.ಆರ್ ಅಂಬೇಡ್ಕರ್ ಮೇಲಿನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗಳ ವಿರುದ್ಧ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಪಕ್ಷಗಳ ಪ್ರತಿಭಟನೆ ಮುಂದುವರಿದಿದೆ.ಈ ನಡುವೆ ಮೋದಿ ಅವರು ಮಧ್ಯಾಹ್ನ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದು ಗಮನಸೆಳೆದಿದೆ. ಮೂಲಗಳ ಪ್ರಕಾರ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮುಂದಿನ ಅಧ್ಯಕ್ಷರ ಆಯ್ಕೆ ಕುರಿತು ಚರ್ಚಿಸಲು ಪ್ರಧಾನಿ ಮೋದಿಯವರು ಈ ಇಬ್ಬರು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದಾರೆ.
ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರೆ, ಖರ್ಗೆ ಅವರು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ಸಂಪೂರ್ಣ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಈ ಮಹತ್ವದ ನೇಮಕಾತಿಯನ್ನು ಮೇಲ್ವಿಚಾರಣೆ ಮಾಡುವ ಪ್ರಧಾನಿ ನೇತೃತ್ವದ ಸಮಿತಿಯಲ್ಲಿ ಇಬ್ಬರೂ ನಾಯಕರು ಸಹ ಭಾಗವಾಗಿದ್ದಾರೆ. ಪ್ರಧಾನಿ ಭೇಟಿ ವೇಳೆ ಈ ವೇಳೆ ಅಮಿತ್ ಶಾ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೂಡ ಉಪಸ್ಥಿತರಿದ್ದರು.ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಅಂಬೇಡ್ಕರ್ ಅವರನ್ನು ಅವಮಾನಿಸಿದ ಆರೋಪ ಎದುರಿಸುತ್ತಿರುವ ಅಮಿತ್ ಶಾ ಅವರನ್ನು ಬಲವಾಗಿ ಸಮರ್ಥಿಸಿಕೊಂಡರು. ಕೇಂದ್ರ ಗೃಹ ಸಚಿವರು ಸಂವಿಧಾನದ ಸೃಷ್ಟಿಕರ್ತನನ್ನು ಅವಮಾನಿಸಿದ ಕಾಂಗ್ರೆಸ್‌ನ ಕರಾಳ ಇತಿಹಾಸವನ್ನು ಬಹಿರಂಗಪಡಿಸಿದ್ದಾರೆ ಎಂದು ಹೇಳಿದರು.