ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಆಗಿದ್ದು, ಇನ್ನೂ ಮುಂದಿನ 2 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆಯು ಈಗ ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸಮಭಾಜಕ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿದೆ. ಇದರಿಂದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಹಾಸನ, ಚಾಮರಾಜನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಇನ್ನು ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಜನವರಿ 20 ರವರೆಗೂ ಇದೇ ಹವಾಮಾನ ಮುಂದುವರಿಯಲಿದೆ.
ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದ್ದು, ನಾಳೆಯೂ ಹೀಗೆ ಇರಲಿದೆ.