ಸಮಗ್ರ ನ್ಯೂಸ್: ಬೆಳಗಾವಿಯಲ್ಲಿ ಮರಾಠಿ ವಿಚಾರವಾಗಿ ಗಲಭೆ ನಡೆಯುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಶುಕ್ರವಾರ ಸಾಲು ಸಾಲು ಪ್ರತಿಭಟನೆಗೆ ಕರೆ ನೀಡಿದ್ದು, ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ಹಾಗೂ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಮಾಡುವುದಾಗಿ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲು ನಿರ್ಧರಿಸಲಾಗಿದೆ.
ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಗೂ ಮಾರ್ಚ್ 7 ರಂದು ಬೆಳಗಾವಿ ಚಲೋಗೆ ಕರೆ ನೀಡಲಾಗಿದ್ದು, ಇದಕ್ಕೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಅಲ್ಲದೆ ಮಾರ್ಚ್ 11 ರಂದು ಮೇಕೆದಾಟಿಗಾಗಿ ಅತ್ತಿಬೆಲೆ ತಮಿಳುನಾಡು ಗಡಿ ಬಂದ್, ಮಾ.14 ರಾಮನಗರ ಮಂಡ್ಯ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ಮತ್ತು ಮಾ.17 ರಂದು ಹೊಸಕೋಟೆ – ಚೆನ್ನೈ ಹೆದ್ದಾರಿ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದರು.
ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಬೆಳಗಾವಿ ನಮ್ಮದು. ಮರಾಠ ಪುಂಡರ, ಎಂಇಎಸ್ ಗೂಂಡಾಗಳ ವಿರುದ್ಧ ನಮ್ಮ ಹೋರಾಟ. ಕೂಡಲೇ ಸರ್ಕಾರ ಎಂಇಎಸ್ ಅನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.