ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕುರಿತು ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಗೃಹಸಚಿವ ಜಿ. ಪರಮೇಶ್ವರ್, “ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ಈಗಾಗಲೇ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಯಾವುದೇ ಸಮುದಾಯದವರನ್ನು ಕಾನೂನು ಉಲ್ಲಂಘನೆ ಮಾಡಲು ಬಿಡಲ್ಲ. ಎಲ್ಲಾ ತರದ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತೇವೆ.” ಎಂದು ಹೇಳಿದರು.
ದ.ಕ.ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾದ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಅವಲೋಕನ ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವ ಸಲುವಾಗಿ ಪರಮೇಶ್ವರ್ ಮಂಗಳೂರಿಗೆ ಆಗಮಿಸಿದ್ದು, ಸರಣಿ ಸಭೆ ನಡೆಸಿದ್ದಾರೆ.
ಕೊಲೆ ನಡೆದ ಕ್ಷಣದಿಂದಲೇ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡರು. ಸಿಸಿ ಕ್ಯಾಮರಾ ಫೂಟೇಜ್ ಅಧಾರದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.