ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕವಾಗಿದ್ದಾರೆ.
ಮೇ.12ರಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಆಯ್ಕೆ ದೇವಳದ ಆಡಳಿತ ಕಛೇರಿ ಸಭಾಂಗಣದಲ್ಲಿ ನಡೆಯಿತು. ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಹರೀಶ್ ಇಂಜಾಡಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು MLC ಮಂಜುನಾಥ ಭಂಡಾರಿ ಕಾಂಗ್ರೆಸ್ ಮುಖಂಡ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿ ಹೆಸರನ್ನು ಶಿಫಾರಸ್ಸು ಮಾಡಿದ್ದರು. ಆದರೆ ಹರೀಶ್ಗೆ ಅಧ್ಯಕ್ಷ ಸ್ಥಾನ ನೀಡಲು ಸುಬ್ರಹ್ಮಣ್ಯ ಗ್ರಾಮಸ್ಥರು ವಿರೋಧಿಸಿದ್ದರು.
ಅಲ್ಲದೇ ಮರಳು ಮಾಫಿಯಾ ಮತ್ತು ಮರ ಕಳ್ಳ ಸಾಗಾಣೆ ಆರೋಪಿಸಿ ದಾಖಲೆ ಸಮೇತ ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಗೆ ಸುಬ್ರಹ್ಮಣ್ಯ ಗ್ರಾಮಸ್ಥರು ಪತ್ರ ಬರೆದಿದ್ದರು. ಆದರೆ ಗ್ರಾಮಸ್ಥರ ಮನವಿಗೂ ಕ್ಯಾರೆ ಎನ್ನದೇ ಹರೀಶ್ ಇಂಜಾಡಿ ನೇಮಕ ಮಾಡಲಾಗಿದೆ.
ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಆಕ್ರೋಶ ಹೊರಹಾಕಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದಾಗ ರೌಡಿ ಶೀಟರ್ ಎಂದಿದ್ದ ಕಾಂಗ್ರೆಸ್, ರೌಡಿಶೀಟರ್ ಆದ ಕಾರಣ ಸುಹಾಸ್ ಮನೆಗೆ ಭೇಟಿ ನೀಡಲ್ಲ ಎಂದು ಪರಮೇಶ್ವರ್, ದಿನೇಶ್ ಗುಂಡೂರಾವ್ ಹೇಳಿದ್ದರು.
ಆದರೆ ಇದೀಗ ಗುಂಡೂರಾವ್ ಶಿಫಾರಸ್ಸಿನಂತೆ ಮಾಜಿ ರೌಡಿಶೀಟರ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷ ಪಟ್ಟ ನೀಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಕಿಡಿಕಾರಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿ ಮೇಲೆ ಅನೇಕ ಆರೋಪಗಳು ಕೇಳಿಬಂದಿವೆ. ನಕಲಿ ಚೆಕ್ ನೀಡಿ ಹಣ್ಣು-ಕಾಯಿ ಟೆಂಡರ್ ಮಾಡಿ ದೇಗುಲ ಆಡಳಿತ ಮಂಡಳಿಗೆ ವಂಚನೆ ಮಾಡಿರುವ ಆರೋಪ ಇದೆ. ಇದೇ ಆರೋಪದಲ್ಲಿ ಅವರನ್ನು ಬಂಧಿಸಲಾಗಿತ್ತು.