ಸಮಗ್ರ ನ್ಯೂಸ್: ಭಾರೀ ಗಾಳಿ ಮಳೆಯ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಜೂ.27 ರಂದು ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಮಲೆನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಐದು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ನರಸಿಂಹರಾಜ ಪುರ ತಾಲೂಕುಗಳಲ್ಲಿ ಶಾಲೆಗಳಿಗೆ ಜೂ.27ರಂದು ರಜೆ ಘೋಷಿಸಲಾಗಿದೆ.
ಮಡಿಕೇರಿ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದಕ್ಷಿಣ ಕೊಡಗಿನಲ್ಲಿ ಕಳೆದ 24 ಗಂಟೆಗಳಲ್ಲಿ 14 ಇಂಚಿಗೂ ಅಧಿಕ ಮಳೆಯಾಗಿದೆ. ನದಿ ತೊರೆಗಳು ತುಂಬಿ ಹರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ಎದುರಾಗಿದೆ. ಕೇರಳ ಕೊಡಗು ಗಡಿ ಭಾಗದ ಕುಟ್ಟ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಶ್ರೀಮಂಗಲ, ಹುದಿಕೇರಿ, ಶಾಂತಳ್ಳಿ, ನಾಪೋಕ್ಲು ಸೇರಿದಂತೆ ಹಲವು ಗ್ರಾಮಗಳಲ್ಲಿ ಅಧಿಕ ಮಳೆಯಾಗುತ್ತಿದ್ದು, ಜನರು ಸಂಕಷ್ಟ ಎದುರಿಸುತ್ತಿದ್ದಾರೆ.
ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆೆಯ ಆರ್ಭಟಕ್ಕೆ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಲವೆಡೆಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಮನೆ, ರಸ್ತೆ, ಸೇತುವೆ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ. ಕಾವೇರಿ ಮತ್ತು ದಕ್ಷಿಣ ಕೊಡಗಿನ ನದಿಪಾತ್ರದ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಾವೇರಿ ಕ್ಷೇತ್ರವಾದ ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಇಂದು ಮಳೆಯ ತೀವ್ರತೆ ಹೆಚ್ಚಾಗುವುದರೊಂದಿಗೆ ‘ತ್ರಿವೇಣಿ ಸಂಗಮ’ ಮುಳುಗಡೆಯಾಗಿದೆ.







