ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗೆ ರಾಜ್ಯ ಸರಕಾರ ರಚಿಸಿರುವ ಎಸ್ಐಟಿ ತಂಡ ಮಂಗಳೂರಿಗೆ ಆಗಮಿಸಿದೆ. ಇದರೊಂದಿಗೆ ಅಧಿಕೃತವಾಗಿ ಪ್ರಕರಣದ ತನಿಖೆ ಪ್ರಾರಂಭವಾಗಲಿದೆ.
ತನಿಖೆಯ ಭಾಗವಾಗಿರುವ ಡಿಐಜಿ ಎಂ.ಎನ್. ಅನುಚೇತ್ ಮಂಗಳೂರಿಗೆ ಆಗಮಿಸಿ ಇತರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಎಂದು ಮೂಲಗಳು ತಿಳಿಸಿವೆ.
ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್.ಅನುಚೇತ್ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಸದಸ್ಯರಾಗಿದ್ದಾರೆ. ಅನುಚೇತ್ ಮತ್ತು ದಯಾಮ ಮಾತ್ರ ದಕ್ಷಿಣ ಕನ್ನಡಕ್ಕೆ ಶುಕ್ರವಾರ ಬಂದಿದ್ದು ಮಂಗಳೂರಿನಲ್ಲಿ ಎರಡು ಸಭೆಗಳನ್ನು ನಡೆಸಿದರು.
ಎಸ್‌ಐಟಿಗೆ ನಿಯೋಜಿಸಿದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಒಳಗೊಂಡ ತಂಡದ ಜೊತೆ ನಗರದ ಸರ್ಕೀಟ್ ಹೌಸ್‌ನಲ್ಲಿ ಸಭೆ ನಡೆಸಿದ ಅನುಚೇತ್ ಮತ್ತು ದಯಾಮ, ಸಂಜೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಜೊತೆ ಅವರ ಕಚೇರಿಯಲ್ಲಿ ಸಮಾಲೋಚನೆ ನಡೆಸಿದರು.
ವಿಶೇಷ ತನಿಖಾ ತಂಡಕ್ಕೆ ಇನ್‌ಸ್ಪೆಕ್ಟರ್‌ಗಳು, ಸಬ್ ಇನ್‌ಸ್ಪೆಕ್ಟರ್‌ಗಳು, ಹೆಡ್ ಕಾನ್‌ಸ್ಟೆಬಲ್ ಹಾಗೂ ಕಾನ್‌ಸ್ಟೆಬಲ್‌ಗಳನ್ನು ಒಳಗೊಂಡ 20 ಮಂದಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಸರ್ಕೀಟ್ ಹೌಸ್‌ನಲ್ಲಿ ನಡೆದ ಸಭೆಯಲ್ಲಿ ಈ ಪೈಕಿ 12 ಮಂದಿ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ. ಒಂದೆರಡು ದಿನಗಳಲ್ಲಿ ಎಲ್ಲರೂ ತನಿಖಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು ಸಿದ್ಧರಾಗಿರುವಂತೆ ಅನುಚೇತ್ ಅವರು ತಿಳಿಸಿದ್ದಾರೆ ಎನ್ನಲಾಗಿದೆ.







