ಸಮಗ್ರ ನ್ಯೂಸ್: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಈಶಾನ್ಯ ದಿಕ್ಕಿನ ಮಾರುತಗಳು ಮತ್ತು ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕದ ಮೇಲೆ ಪೂರ್ವ ದಿಕ್ಕಿನ ಮಾರುತಗಳು ರಾಜ್ಯದ ಮೇಲೆ ಕೆಳ ಉಷ್ಣವಲಯದ ಮಟ್ಟದಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಈ ಹಿನ್ನೆಲೆ ರಾಜ್ಯದಲ್ಲಿ ತಾಪಮಾನ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.
ಡಿಸೆಂಬರ್ 22ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಈ ವೇಳೆ ಚಳಿಯು ತೀವ್ರಗೊಳ್ಳಲಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಭಾಗದಲ್ಲಿ ಪ್ರಮುಖವಾಗಿ ಮಧ್ಯಾಹ್ನದ ವೇಳೆಗೆ ಶುಭ್ರ ಆಕಾಶ ಕಂಡುಬರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟವಾದ ಮಂಜು ಬೀಳುವ ಸಾಧ್ಯತೆ ಇದೆ. ಈ ವೇಳೆ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಹಾಗೂ 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕದ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಉತ್ತರದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರಿನಲ್ಲಿ ಹಾಗು ಕರ್ನಾಟಕದ ಒಳನಾಡಿನಲ್ಲಿ ಶೀತಲ ಅಲೆಯ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆ ಇದೆ.
ಕಳೆದ 24 ಗಂಟೆಗಳಲ್ಲಿ ಉತ್ತರ ಆಂತರಿಕ ಕರ್ನಾಟಕ ಮತ್ತು ಮಂಡ್ಯದ ರಾಯಚೂರು ಮತ್ತು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ತಾಪಮಾನ ಕುಸಿದಿದೆ. ಉಳಿದ ಸ್ಥಳಗಳಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿಲ್ಲ. ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಸ್ವಲ್ಪ ಹೆಚ್ಚಳ ಮತ್ತು ಎರಡು ದಿನಗಳವರೆಗೆ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಆಗುವ ಮುನ್ಸೂಚನೆ ಇಲ್ಲ. ನಂತರ ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಸ್ವಲ್ಪ ಹೆಚ್ಚಳವಾಗಲಿದೆ ಎಂದು ಹೇಳಿದೆ.







