ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದಿದೆ.
ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 17 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 17 ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಬಸ್ ಅತಿವೇಗದಿಂದ ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡದ ರಭಸಕ್ಕೆ ನೋಡ ನೋಡುತ್ತಿದ್ದಂತೆ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕನ್ನಾಲಿಗೆಗೆ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗೋ ಸಾಧ್ಯತೆ ಇದೆ ಎನ್ನಲಾಗಿದೆ.
ವೇಗವಾಗಿ ಬರುತ್ತಿದ್ದ ಬಸ್ ಬೃಹತ್ ಕಂಟೈನರ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಗೆ ಬೆಂಕಿ ಹತ್ತಿಕೊಂಡಿದೆ. ಒಂದಷ್ಟು ಪ್ರಯಾಣಿಕರು ಬಸ್ನಿಂದ ಇಳಿದರೂ ಕೂಡಾ 17ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣ ‘X’ ಮೂಲಕ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಕರ್ನಾಟಕದ ಚಿತ್ರದುರ್ಗದಲ್ಲಿ ಸಂಭವಿಸಿದ ರಸ್ತೆ ಅಪಘಾತದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳನ್ನು ಸೂಚಿಸುತ್ತೇನೆ. ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ ಎಂದು ಬರೆದುಕೊಂಡಿದ್ದಾರೆ.
ಅಲ್ಲದೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ 21ಕ್ಕೂ ಹೆಚ್ಚು ಪ್ರಯಾಣಿಕರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.







