ಕಡಬ: ತಂದೆಗೆ ಚೂರಿ ಇರಿದು ಕೋವಿಯಿಂದ‌ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಮಗ| ತಂದೆ ಗಂಭೀರ, ಮಗ ದುರ್ಮರಣ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಮನಕಲಕುವ ಘಟನೆಯೊಂದು ಸಂಭವಿಸಿದೆ. ಕ್ಷುಲ್ಲಕ ಕಾರಣಕ್ಕೆ ತಂದೆಯೊಂದಿಗೆ ಜಗಳವಾಡಿದ 17 ವರ್ಷದ ಬಾಲಕನೋರ್ವ, ತಂದೆಗೆ ಚೂರಿಯಿಂದ ಇರಿದು ಬಳಿಕ ತಾನೂ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Ad Widget ... ..

​ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಪುತ್ರ ಮೋಕ್ಷ (17) ಮೃತಪಟ್ಟ ದುರ್ದೈವಿ. ಮೂಲತಃ ಕೇರಳದವರಾದ ವಸಂತ ಅಮೀನ್ ಅವರು ರಾಮಕುಂಜದ ಪಾದೆಯಲ್ಲಿ ಜಾಗ ಖರೀದಿಸಿ ಮನೆ ನಿರ್ಮಿಸಿಕೊಂಡು ವಾಸವಾಗಿದ್ದರು. ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ವಿದ್ಯಾರ್ಥಿಯಾಗಿದ್ದ ಮೋಕ್ಷ, ಶನಿವಾರ (ಜ. 24) ಸಂಜೆ ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ತಂದೆಯ ಜೊತೆ ಜಗಳವಾಡಿದ್ದಾನೆ ಎನ್ನಲಾಗಿದೆ.

Ad Widget

​ಜಗಳ ವಿಕೋಪಕ್ಕೆ ತಿರುಗಿದಾಗ ಆಕ್ರೋಶಗೊಂಡ ಮೋಕ್ಷ, ತಂದೆ ವಸಂತ ಅವರಿಗೆ ಚೂರಿಯಿಂದ ಇರಿದಿದ್ದಾನೆ. ಬಳಿಕ ಮನೆಯಲ್ಲಿದ್ದ ಕೋವಿಯನ್ನು ಬಳಸಿ ತನಗೆ ತಾನೇ ಶೂಟ್ ಮಾಡಿಕೊಂಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮೋಕ್ಷ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

​ಆಸ್ಪತ್ರೆಗೆ ದಾಖಲಾದ ತಂದೆ:ಮಗನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ವಸಂತ ಅಮೀನ್ ಅವರನ್ನು ತಕ್ಷಣವೇ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಲ್ಲಿ ತಂದೆ ಮತ್ತು ಮಗ ಇಬ್ಬರೇ ವಾಸವಿದ್ದರು ಎಂದು ತಿಳಿದುಬಂದಿದೆ.

​ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಓರ್ವ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಮೋಕ್ಷ ಇಂತಹ ತೀವ್ರ ನಿರ್ಧಾರ ಕೈಗೊಳ್ಳಲು ಕಾರಣವೇನು? ತಂದೆ-ಮಗನ ನಡುವೆ ಇದ್ದ ವೈಮನಸ್ಯಕ್ಕೆ ಹಿನ್ನೆಲೆಯೇನು? ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *