ಸಮಗ್ರ ನ್ಯೂಸ್: ರಾಜ್ಯದಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದ್ದು, ಸುಡುವ ಬಿಸಿಲಿನ ನಡುವೆಯೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಧಾರವಾಡ ಮತ್ತು ದಕ್ಷಿಣ ಕನ್ನಡದ ಧರ್ಮಸ್ಥಳ ಸೇರಿದಂತೆ ಹಲವೆಡೆ ಮಳೆಯ ಸಿಂಚನವಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ; ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಮುಂದಿನ 5 ದಿನಗಳ ಕಾಲ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಅದೇ ರೀತಿ ದಕ್ಷಿಣ ಒಳನಾಡಿನ ಕೊಡಗು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಸಿಂಚನವಾಗಲಿದೆ.







