ಸಮಗ್ರ ನ್ಯೂಸ್: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಸಾರ್ವಜನಿಕವಾಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ಮೂಲದ ನರೇಂದ್ರ ಮೃತಪಟ್ಟ ದುರ್ದೈವಿ.
ಇವರು ಕಳೆದ ಏಪ್ರಿಲ್ 11ರಂದು ಶನಿವಾರ ಸಂಜೆ ಧರ್ಮಸ್ಥಳದ ನೇತ್ರಾವತಿ ನದಿಯ ಸ್ನಾನಘಟ್ಟದ ಸಮೀಪ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಏಪ್ರಿಲ್ 11ರ ಸಂಜೆ ವೇಳೆ ಸ್ನಾನಘಟ್ಟದ ಬಳಿ ಬಂದಿದ್ದ ನರೇಂದ್ರ ಅವರು, ಕ್ಯಾನ್‌ನಲ್ಲಿದ್ದ ಪೆಟ್ರೋಲನ್ನು ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು.
ದೇಹದಾದ್ಯಂತ ಬೆಂಕಿ ವ್ಯಾಪಿಸಿ ಅವರು ಕಿರುಚಾಡುತ್ತಿದ್ದಾಗ, ಸ್ಥಳದಲ್ಲಿದ್ದ ಪ್ರವಾಸಿಗರು ಮತ್ತು ಸ್ಥಳೀಯರು ತಕ್ಷಣ ಧಾವಿಸಿ ಬೆಂಕಿ ನಂದಿಸಿ ಅವರನ್ನು ರಕ್ಷಿಸಿದ್ದರು. ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದ ಅವರನ್ನು ತಕ್ಷಣವೇ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಮಾರು ಶೇ. 80ಕ್ಕೂ ಅಧಿಕ ಸುಟ್ಟ ಗಾಯಗಳಿಂದಾಗಿ ನರೇಂದ್ರ ಅವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿತ್ತು.
ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.







