ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ವರುಣನ ಅಬ್ಬರ ಶುರುವಾಗುವ ಲಕ್ಷಣಗಳು ಕಾಣಿಸುತ್ತಿವೆ. ಬೆಂಗಳೂರು ಹವಾಮಾನ ಕೇಂದ್ರವು ನೀಡಿರುವ ಇತ್ತೀಚಿನ ವರದಿಯಂತೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ವಿಶೇಷವಾಗಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆ ಮತ್ತು ಭಾರಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.
ಬಂಗಾಳ ಉಪಸಾಗರದ ದಕ್ಷಿಣ ಭಾಗ, ಅಂಡಮಾನ್ ಸಮುದ್ರ ಮತ್ತು ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳಿಗೆ ಮೇ 16ರ ಸುಮಾರಿಗೆ ನೈಋತ್ಯ ಮಾನ್ಸೂನ್ ಪ್ರವೇಶಿಸಲು ಹವಾಮಾನ ಪೂರಕವಾಗಿದೆ. ಪ್ರಸ್ತುತ ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪರಿಣಾಮವಾಗಿ ರಾಜ್ಯದಲ್ಲಿ ಮಳೆಯ ಚಟುವಟಿಕೆಗಳು ಹೆಚ್ಚಾಗಲಿವೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಮೇ 14 ಮತ್ತು 15 ರಂದು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಈ ಸಮಯದಲ್ಲಿ ಗಂಟೆಗೆ 50 ರಿಂದ 60 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಜನತೆ ಜಾಗರೂಕರಾಗಿರಲು ಸೂಚಿಸಲಾಗಿದೆ. ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರದಲ್ಲಿ ಮೇ 15 ಮತ್ತು 16 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೇ 15 ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯ ಮುನ್ಸೂಚನೆಯನ್ನೂ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೇ 14 ಮತ್ತು 15 ರಂದು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮೇ 13 ರಿಂದ 17 ರವರೆಗೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕರಾವಳಿಯಲ್ಲಿ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ನಂತರದ ದಿನಗಳಲ್ಲಿ ಮಿಂಚು ಮತ್ತು ಗುಡುಗಿನ ಆರ್ಭಟ ಹೆಚ್ಚಿರಲಿದೆ.







