ಸಮಗ್ರ ನ್ಯೂಸ್: ರಾಜ್ಯದಲ್ಲಿ ಇಂದೂ ಸಹ ಮಳೆಯ ಅಬ್ಬರ ಮುಂದುವರಿಯಲಿದ್ದು, ಹಲವೆಡೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಗಂಟೆಗೆ 50-60 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿಯೂ ಗಾಳಿಯ ವೇಗ ಹೆಚ್ಚಿರಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಮೇ 22ರಿಂದ 25ರವರೆಗೆ ರಾಜ್ಯಾದ್ಯಂತ ಗುಡುಗು-ಮಿಂಚಿನೊಂದಿಗೆ ತೀವ್ರ ಮಳೆಯ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚಿಸಿದೆ. ತಗ್ಗು ಪ್ರದೇಶಗಳಲ್ಲಿ ಜಲಾವೃತ, ಮರಗಳು ಹಾಗೂ ವಿದ್ಯುತ್ ಕಂಬಗಳು ಉರುಳುವ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಮನವಿ ಮಾಡಲಾಗಿದೆ.


















