ಸಮಗ್ರ ನ್ಯೂಸ್: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಿಂಬಾಕಿ ಬಿಡುಗಡೆ ಮಾಡಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ಗೃಹ ಲಕ್ಷ್ಮೀ ಯೋಜನೆಯಡಿ ಹಿಂಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ ಆರ್.ಗಂಗಾ ಮತ್ತು ನಂದಿನಿ ಲೇಔಟ್ ನಿವಾಸಿ ಜಿ.ಡಿ.ಪವಿತ್ರಾ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ನ್ಯಾ.ಸೂರಜ್ ಗೋವಿಂದ ರಾಜ್ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಜ್ಯ ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ 2023ರ ಆಗಸ್ಟ್‌ನಿಂದ ಮನೆಯೊಡತಿಗೆ ಮಾಸಿಕ 2 ಸಾವಿರ ರು. ಬಿಡುಗಡೆ ಮಾಡಲು ಆರಂಭಿಸಿದ್ದು, ಆಡಳಿತಾತ್ಮಕ ಕಾರಣದಿಂದ 2025ರ ಫೆಬ್ರವರಿ ತಿಂಗಳ ಹಣ ಬಿಡುಗಡೆ ಮಾಡಿರಲಿಲ್ಲ. ಹಾಗೆಯೇ ಮಾರ್ಚ್ ತಿಂಗಳ ಹಣವನ್ನೂ ಪಾವತಿಸಿರಲಿಲ್ಲ. ಹಾಗಾಗಿ, ಈ ಹಿಂಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.







