ಸಮಗ್ರ ನ್ಯೂಸ್: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಇನ್ನು ಮುಂದೆ ಯಾವುದೇ ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡಿಕೊಡಲು ಅಧಿಕಾರಿಗಳು ಅಥವಾ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಟ್ಟರೆ ಸಾರ್ವಜನಿಕರು ತಕ್ಷಣ ದೂರು ನೀಡಬಹುದು. ಇದಕ್ಕಾಗಿ ಪ್ರತಿ ಕಚೇರಿಯ ಪ್ರಮುಖ ಸ್ಥಳಗಳಲ್ಲಿ ಸ್ಪಷ್ಟವಾಗಿ ಕಾಣಿಸುವಂತೆ ದೊಡ್ಡ ಫೋನ್ ನಂಬರ್ ಅಥವಾ ಸಹಾಯವಾಣಿ ಸಂಖ್ಯೆಯನ್ನು ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಯಾರು ಕೂಡ 10 ರೂಪಾಯಿ ಲಂಚ ನೀಡಬಾರದು, ಭ್ರಷ್ಟಾಚಾರ ಮುಕ್ತ ಕರ್ನಾಟಕ ನಿರ್ಮಿಸುವುದೇ ನಮ್ಮ ಗುರಿ ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.
ರಾಜ್ಯದಲ್ಲಿ ಗಾಂಜಾ, ಡ್ರಗ್ಸ್ ಹಾಗೂ ಸೈಬರ್ ಅಪರಾಧಗಳನ್ನು ಹತ್ತಿಕ್ಕಲು ಪೊಲೀಸ್ ಇಲಾಖೆಗೆ ಮುಕ್ತ ಅಧಿಕಾರ ನೀಡಲಾಗಿದೆ. ಪ್ರತಿ ಪೊಲೀಸ್ ಠಾಣೆಯಲ್ಲಿ ಐದು ಪೊಲೀಸರ ವಿಶೇಷ ತಂಡವನ್ನು ರಚಿಸಿ ರೌಡಿಸಂ ನಿಗ್ರಹಿಸಲು ಸೂಚಿಸಲಾಗಿದೆ. ಅಲ್ಲದೆ, ಸಾರ್ವಜನಿಕರನ್ನು ಪೀಡಿಸುವ ನಕಲಿ ಫೈನಾನ್ಸ್ ಕಂಪನಿಗಳ ವಿರುದ್ಧವೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಮುಂದಿನ ಒಂದು ತಿಂಗಳ ಒಳಗಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ ಮತ್ತು ಪಠ್ಯ ಪುಸ್ತಕಗಳು ತಲುಪಬೇಕು ಎಂದು ಅಧಿಕಾರಿಗಳಿಗೆ ಗಡುವು ನೀಡಲಾಗಿದೆ. ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಹೊಸ ಸಿಎಸ್‌ಆರ್ ನೀತಿಯನ್ನು ತರಲಾಗುತ್ತಿದೆ. ಇನ್ನು ಮಳೆ ಕೊರತೆಯ ಹಿನ್ನೆಲೆಯಲ್ಲಿ ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಆದರೆ ಅರ್ಹರಿಗೆ ಮಾತ್ರ ಯೋಜನೆ ತಲುಪಬೇಕು ಎಂಬ ಕಾರಣಕ್ಕೆ ಗೃಹಲಕ್ಷ್ಮಿ ಯೋಜನೆಗೆ ಪುನಃ ಅರ್ಜಿ ಪಡೆಯಲಾಗುವುದು. ಇದೇ ವೇಳೆ, ಮತದಾನದ ಹಕ್ಕಿನ ಮಹತ್ವ ಸಾರಿದ ಸಿಎಂ, ಮತದಾನದ ಹಕ್ಕಿಲ್ಲದಿದ್ದರೆ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.








