ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ 48 ಗಂಟೆಗಳ ಕಾಲ ವರುಣನ ಆರ್ಭಟ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು (IMD) ಭಾರಿ ಮಳೆ ಮುನ್ನೆಚ್ಚರಿಕೆ ನೀಡಿದೆ.
ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರಾಜ್ಯದ ಒಟ್ಟು 11 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇರುವ 8 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಜಾರಿ ಮಾಡಲಾಗಿದೆ.
ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ನಿರ್ಬಂಧಿಸಲಾಗಿದೆ.
ನದಿ ಪಾತ್ರದ ಹಾಗೂ ತಗ್ಗು ಪ್ರದೇಶಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದ್ದು, ಜಲಪಾತ ಹಾಗೂ ಚಾರಣ ಪ್ರದೇಶಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಓಡಾಡದೆ, ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಮರಗಳ ಬಳಿ ನಿಲ್ಲದೆ ಜಾಗರೂಕರಾಗಿರಲು ಸರ್ಕಾರ ಮನವಿ ಮಾಡಿದೆ.
ಜುಲೈ 7 ರಂದು ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕಲಬುರಗಿ, ಧಾರವಾಡ, ಗದಗ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಳಿದಂತೆ ಸಾಧಾರಣ ಮಳೆಯ ನಿರೀಕ್ಷೆ ಇರುವ ಉತ್ತರ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಯಾದಗಿರಿ, ಬೀದರ್, ಕೊಪ್ಪಳ, ಬಳ್ಳಾರಿ ವಿಜಯನಗರ, ಚಿತ್ರದುರ್ಗ, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ರಾಮನಗರ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜುಲೈ 8ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ರಾಯಚೂರು, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಿಕ್ಕಬಳ್ಳಾಪುರ, ಜಿಲ್ಲೆಗಳಿಗೆ ಆರೆಂಜ್ ನೀಡಲಾಗಿದೆ, ಮುನ್ಸೂಚನೆಯ ಪ್ರಕಾರ ಮುಂದಿನ ಎರಡು ಮೂರು ದಿನ ಮಾತ್ರ ಉತ್ತಮ ಮಳೆಯಾಗಿದೆ, ನಂತರ ಮುಂಗಾರು ಮತ್ತೆ ದುರ್ಬಲವಾಗಲಿದೆ ಎಂದು ಹೇಳಲಾಗಿದೆ.







