ಸಮಗ್ರ ನ್ಯೂಸ್: ಕಡಲ ನಗರಿ ಮಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧ ಪೊಲೀಸರು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಉರ್ವಾ ಸಮೀಪದ ಕಟ್ಟಡ ನಿರ್ಮಾಣ ಪ್ರದೇಶದಲ್ಲಿ ದಾಳಿ ನಡೆಸಿ ನಾಲ್ವರು ಅಪ್ರಾಪ್ತರು ಸೇರಿದಂತೆ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಸುರತ್ಕಲ್‌ನಲ್ಲಿ ನಡೆದ ಕಾರ್ಯಾಚರಣೆಯ ಬೆನ್ನಲ್ಲೇ ಈ ದಾಳಿ ನಡೆದಿದ್ದು, ಇದರೊಂದಿಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಲ್ಲಿ ಬಂಧಿತರಾದ ಅಕ್ರಮ ವಲಸಿಗರ ಒಟ್ಟು ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಬಂಧಿತ ಆರೋಪಿಗಳು ಪಶ್ಚಿಮ ಬಂಗಾಳದ ನಕಲಿ ವಿಳಾಸಗಳನ್ನು ಬಳಸಿಕೊಂಡು ಮಂಗಳೂರಿಗೆ ಬಂದು ಕೂಲಿ ಕೆಲಸ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕಾರ್ಯಾಚರಣೆಯ ವೇಳೆ ಪೊಲೀಸರು ಇವರಿಂದ ಬಾಂಗ್ಲಾದೇಶದ ರಾಷ್ಟ್ರೀಯ ಗುರುತಿನ ಚೀಟಿ, ಜನನ ಪ್ರಮಾಣಪತ್ರ ಹಾಗೂ ಕುಟುಂಬಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಈ ಅಕ್ರಮ ವಲಸೆ ಜಾಲಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮೂಲದ ಏಜೆಂಟ್ ಒಬ್ಬರ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸದ್ಯ ಬಂಧಿತರ ವಿರುದ್ಧ ಮುಂದಿನ ಕಾನೂನು ಕ್ರಮಗಳಿಗಾಗಿ ಬೆಂಗಳೂರಿನ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO)ಗೆ ವರದಿಯನ್ನು ಸಲ್ಲಿಸಲಾಗಿದ್ದು, ಈ ಜಾಲದಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.







