ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶನಿವಾರ (ಜು.25) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಮತ್ತು ಪದವಿ ಪೂರ್ವ (PU) ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ. ಆದೇಶ ಉಲ್ಲಂಘಿಸಿ ತರಗತಿಗಳನ್ನು ನಡೆಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಈ ರಜೆ ಅನ್ವಯಿಸುವುದಿಲ್ಲ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನದಿ, ಹಳ್ಳ, ಕೊಳ್ಳ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.







