ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರ ನಡುವೆ ಇದೀಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ (Low Pressure Area) ಕುಸಿತವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದಿನಿಂದ ಮಳೆ ಸುರಿಯಲಿದೆ ಎಂದು ಹೇಳಿದೆ. ಇಂದು ಕರಾವಳಿ ಭಾಗದಲ್ಲಿ ಲಘುವಿನಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲೂ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ.
ಇಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು, ಕೊಡಗು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಯಚೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಜೊತೆಗೆ ಕೆಲವೆಡೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಇಂದು ಮಳೆ ಮುನ್ಸೂಚನೆ ನಡುವೆ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೊಷಿಸಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ಮಂಡ್ಯ, ಹಾಸನ, ಚಿಕ್ಕಬಳ್ಳಾಪುರ, ಕೊಡಗು, ಚಾಮರಾಜನಗರ, ಕೋಲಾರ, ರಾಮನಗರ, ಚಿತ್ರದುರ್ಗ, ವಿಜಯನಗರ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ ಜಿಲ್ಲೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆ ಆಗಲಿದ್ದು, ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಆದರೆ ಕರಾವಳಿ ತೀರಕ್ಕೆ ಇಳಿಯದಂತೆ ಮೀನುಗಾರರಿಗೆ ಯಾವುದೇ ವಿಶೇಷ ಎಚ್ಚರಿಕೆ ನೀಡಿಲ್ಲವಾಗಿದೆ. ಅಲ್ಲದೇ ಈ ಜಿಲ್ಲೆಗಳಲ್ಲಿ ಬಿಸಲಿನ ತಾಪಮಾನ ಹೆಚ್ಚಿರಲಿದೆ ಎಂದು ಎಚ್ಚರಿಸಲಾಗಿದೆ. ಅದೇ ರೀತಿ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಭಾವ ತೀರಾ ಕಡಿಮೆಯಿರಲಿದ್ದು, ಬಹುತೇಕ ಒಣ ಹವೆ ಮುಂದುವರಿಯಲಿದೆ.










