ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಇಂದು (ಸೆಪ್ಟೆಂಬರ್ 29) ಸಾಧಾರಣ ಮಳೆಯಾಗುವ ಮುನ್ಸೂಚನೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆಪ್ಟೆಂಬರ್ 29ರಿಂದ ಅ.4ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಮೈಸೂರು ಭಾಗದ ಒಟ್ಟು 6 ಜಿಲ್ಲೆಗಳಿಗೆ ಇಂದು ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಭಾಗಗಳಲ್ಲಿ ಮಧ್ಯಾಹ್ನದ ನಂತರ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಜೋರಾದ ಗಾಳಿ ಬೀಸಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಅನೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಬಿರುಗಾಳಿ ಇರಲಿದೆ. ಸೆ. 30 ರ ನಂತರ ಒಣ ಹವೆ ಇರಲಿದೆ.
ಸಿಟಿ ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಶುರುವಾದ ಮಳೆ ಇಡೀ ರಾತ್ರಿ ಗುಡುಗು ಸಹಿತ ಧಾರಾಕಾರ ಸುರಿದಿದೆ. ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ, ಚಾಮರಾಜಪೇಟೆ, ಶಾಂತಿನಗರ, ವಿಜಯನಗರ, ಕೆಂಗೇರಿ, ದೀಪಾಂಜಲಿನಗರ, ರಾಜಾಜಿನಗರ ಸೇರಿದಂತೆ ನಗರದ ಬಹುತೇಕ ಕಡೆ ಧಾರಾಕಾರ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ನಗರದ ಬಹುತೇಕ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ತೀವ್ರ ಪರದಾಡಿದ್ದಾರೆ. ವೈಟ್ಫೀಲ್ಡ್ ಮತ್ತು ಮಾರತ್ತಹಳ್ಳಿ ಭಾಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಕಿಲೋಮೀಟರ್ಗಟ್ಟಲೆ ವಾಹನಗಳು ನಿಂತಿವೆ. ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗಿದ್ದು, ಕಸಕಡ್ಡಿಗಳು ಸಿಲುಕಿ ನೀರು ಸರಾಗವಾಗಿ ಹರಿಯಲು ಅಡ್ಡಿಯಾಗಿದೆ.









