ಸಮಗ್ರ ನ್ಯೂಸ್: ರಾಜ್ಯದಲ್ಲಿ ವರುಣನ ಅಬ್ಬರ ಮತ್ತಷ್ಟು ತೀವ್ರಗೊಳ್ಳಲಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ತಾಜಾ ನಕ್ಷೆಯ ಪ್ರಕಾರ, ದಕ್ಷಿಣ ಒಳನಾಡಿನ 3 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, ಕರಾವಳಿ, ಮಲೆನಾಡು ಮತ್ತು ರಾಜಧಾನಿ ಬೆಂಗಳೂರಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ನಿರಂತರ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.









