ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ನಿಯಂತ್ರಣಕ್ಕಾಗಿ ಶನಿವಾರ ಮತ್ತು ಭಾನವಾರ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು ಸಾರ್ವಜನಿಕರು ಸೇರಿದಂತೆ ಉದ್ಯಮ ವಲಯದಲ್ಲಿ ವೀಕೆಂಡ್ ಕರ್ಫ್ಯೂಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಸಿರುವ ವಾರಾಂತ್ಯದ ಲಾಕ್‍ಡೌನ್ ಮತ್ತು ರಾತ್ರಿ ಕರ್ಫ್ಯೂ ಹಿಂಪಡೆಯುವುದು ಬಹುತೇಕ ಖಚಿತ ಎನ್ನಲಾಗಿದೆ.
ಇದೇ 21ರಂದು ಶುಕ್ರವಾರ ನಡೆಯುವ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತಮ್ಮ ಸಂಪುಟದ ಸಹೋದ್ಯೋಗಿಗಳು ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಚರ್ಚಿಸಿ ಸರ್ಕಾರದ ಅಂತಿಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.
ಕೋವಿಡ್‍ನಿಂದಾಗಿ ಈಗಾಗಲೇ ನಷ್ಟದಲ್ಲಿರುವ ವ್ಯಾಪಾರ ಕ್ಷೇತ್ರ ವೀಕೆಂಡ್ ಕಫ್ರ್ಯೂ ಜಾರಿಯಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ಈ ನಿಟ್ಟಿನಲ್ಲಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸಬೇಕು ಎಂಬ ಒತ್ತಡವೂ ಹೆಚ್ಚಾಗುತ್ತಿದೆ. ಜೊತೆಗೆ ಆಡಳಿತಾರೂಢ ಬಿಜೆಪಿ ಶಾಸಕ, ಸಂಸದರಿಂದಲೇ ವೀಕೆಂಡ್ ಕರ್ಪ್ಯೂ ಗೆ ವಿರೋಧ ವ್ಯಕ್ತವಾಗುತ್ತಿದ್ದು, ಸಿಎಂ ಬೊಮ್ಮಾಯಿ ಮೀನಾಮೇಷ ಎಣಿಸುತ್ತಿದ್ದಾರೆ.
ಶುಕ್ರವಾರದ ಸಭೆಯಲ್ಲಿ ಕೋವಿಡ್ ಪರಿಸ್ಥಿತಿ ಹಾಗೂ ಮುಂಜಾಗ್ರತ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ. ವೀಕೆಂಡ್ ಕರ್ಫ್ಯೂ ತೆರವು ಗೊಳಿಸಬೇಕೇ, ಬೇಡವೇ ಎಂಬುದರ ಕುರಿತು ಇದೇ ಸಭೆಯಲ್ಲಿ ನಿರ್ಧಾರವಾಗಲಿದೆ.
ಕೋವಿಡ್‍ನಿಂದಾಗಿ ಹೋಟೆಲ್ ಉದ್ಯಮಕ್ಕೆ ದೊಡ್ಡ ಮಟ್ಟಿನ ಹೊಡೆತ ಬಿದ್ದಿದೆ. ಈಗಾಗಲೇ ಶೇ.50ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇನ್ನು ವೀಕೆಂಡ್‍ಗಳಲ್ಲಿ ಪಾರ್ಸೆಲ್‍ಗೆ ಮಾತ್ರ ಅವಕಾಶವಿದೆ. ಇದು ಹೋಟೆಲ್ ಉದ್ಯಮದ ಮೇಲೆ ಭಾರೀ ಪರಿಣಾಮ ಬೀರಲಿದೆ. ಈ ನಿಟ್ಟಿನಲ್ಲಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸಬೇಕು ಎಂಬುದು ಹೋಟೆಲ್ ಉದ್ಯಮಿಗಳ ಬೇಡಿಕೆಯಾಗಿದೆ.
ಈ ನಡುವೆ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ತಿಂಗಳಾಂತ್ಯಕ್ಕೆ ಉಲ್ಬಣಿಸುವ ಸಾಧ್ಯತೆ ಇದೆ ಎಂದೂ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಇದರಿಂದಾಗಿ ಸರ್ಕಾರ ಇಕ್ಕಟ್ಟಿನಲ್ಲಿ ಸಿಲುಕಿದ್ದು, ಉದ್ಯಮಿಗಳ, ವ್ಯಾಪಾರಸ್ಥರು ಆಕ್ರೋಶಕ್ಕೆ ಮಣಿಯುತ್ತಾ ಅಥವಾ ಜನರ ಆರೋಗ್ಯಕ್ಕೆ ಒತ್ತು ನೀಡುತ್ತಾ ಕಾದುನೋಡಬೇಕಿದೆ.