ಸಮಗ್ರ ನ್ಯೂಸ್: ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ ಸಂಜೆಯಿಂದ ಗುಡುಗು ಮಿಂಚಿನ ಸಹಿತ ಸಾಧಾರಣ ಮಳೆಯಾಗಿದೆ.
ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಆಗಿರುವ ಕಾರಣ ಮುಂದಿನ ಒಂದೆರಡು ದಿನಗಳಲ್ಲಿ ವಿವಿಧೆಡೆ ಮಳೆಯಾಗುವ ಸಾದ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ಅದರಂತೆ ನಿನ್ನೆ ಸಂಜೆಯಿಂದಲೇ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿತ್ತು. ಇಂದು ಮಂಗಳೂರು ನಗರ ಸೇರಿದಂತೆ ಹಲವೆಡೆ ಬೆಳಗ್ಗೆ 6 ಗಂಟೆಯಿಂದಲೇ ಮತ್ತೆ ಗುಡುಗು ಮಿಂಚಿನ ಸಹಿತ ಮಳೆ ಸುರಿಯುತ್ತಿದೆ. ಇದರಿಂದ ಒಣ ಹಾಕಿದ ಅಡಿಕೆ ಹಾಗೂ ಇನ್ನಿತರ ಕೃಷಿ ಉತ್ಪನ್ನಗಳು ನಷ್ಟವಾಗಿವೆ.
ಸಾಮಾನ್ಯವಾಗಿ ಜನವರಿ ಅಂತ್ಯಕ್ಕೆ ದ.ಕ. ಜಿಲ್ಲೆಯಲ್ಲಿ ಚಳಿಯ ವಾತಾವರಣ ಕಡಿಮೆಯಾಗಿರುತ್ತದೆ. ಆದರೆ ಈ ಬಾರಿ ಮಾರ್ಚ್ ನಲ್ಲೂ ಕೆಲ ದಿನಗಳಲ್ಲಿ ಮುಂಜಾನೆ ಮಂಜು ಮುಸುಕಿದ ವಾತಾವರಣ ಕಂಡು ಬರುತ್ತಿದೆ. ಬೆಳಗ್ಗೆ 11 ಗಂಟೆಯ ಬಳಿಕ ತೀವ್ರ ಬಿಸಿಲು ಕೂಡಾ ಜನರನ್ನು ಕಂಗೆಡಿಸುತ್ತಿದೆ.
ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗಲಿದೆ.
ಇಂದು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಾರ್ಚ್ 9 ರಿಂದ 12 ರವರೆಗೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.