ಸಮಗ್ರ ನ್ಯೂಸ್: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಆರ್ಥಿಕತೆಯನ್ನು ಗಮನಿಸಿದ ನಂತರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಮೇಲಿನ ತೆರಿಗೆಯನ್ನು ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಬುಧವಾರ ಕೋವಿಡ್-19 ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕಳೆದ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿಲ್ಲ ಎಂದು ಹೇಳಿದ್ದರು.
ಬಳಿಕ ಈ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ನೋಡೋಣ. ನಾವು ನಮ್ಮ ಆರ್ಥಿಕತೆಯನ್ನು ಗಮನಿಸಬೇಕು. ಅದರ ಆಧಾರದ ಮೇಲೆ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಕುರಿತು ನಾವು ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.