ಸಮಗ್ರ ನ್ಯೂಸ್: ಅಬುದಾಬಿಯ ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ₹ 2 ಸಾವಿರ ಕೋಟಿ ಹೂಡಿಕೆ ಮಾಡಲು ಮುಂದಾಗಿದ್ದು, ಈ ಕುರಿತಂತೆ ಒಪ್ಪಂದಕ್ಕೆ ಗುರುವಾರ ಸಹಿ ಹಾಕಲಾಯಿತು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.
ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಒಕ್ಕೂಟದ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಲುಲು ಗ್ರೂಪ್ ಇಂಟರ್‌ನ್ಯಾಷನಲ್‌ನ ನಿರ್ದೇಶಕ ಎ.ವಿ. ಅನಂತರಾಮನ್ ಮತ್ತು ರಾಜ್ಯ ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ ಸಹಿ ಹಾಕಿದರು.
ಲುಲು ಗ್ರೂಪ್ ರಾಜ್ಯದಲ್ಲಿ ನಾಲ್ಕು ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. ಆ ಮೂಲಕ, 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
ಕೇರಳ ಮೂಲದ ಲುಲು ಗ್ರೂಪ್ಸ್ ಮದ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತನ್ನದೇ ಟ್ರೆಂಡ್ ಕ್ರಿಯೇಟ್ ಮಾಡಿದೆ. ಎಂ.ಎ ಯೂಸುಫ್ ಅಲಿ ಈ ಕಂಪನಿಯ ಒಡೆಯ. ಆದರೆ ಇವರ ಹೆಸರನ್ನು ಸಿಎಂರವರು ತಮ್ಮ ಅಧಿಕೃತ ಟ್ವಿಟರ್ ನಲ್ಲಿ ಪ್ರಸ್ತಾಪಿಸದೇ ಇರುವುದು ಮುಸ್ಲಿಂ ತಾರತಮ್ಯ ಎಂದು ಜಾಲತಾಣಗಳಲ್ಲಿ ಬೊಮ್ಮಾಯಿ ವಿರುದ್ಧ ಆಕ್ಷೇಪ ವ್ಯಕ್ತವಾಗಿದೆ.