ಬೆಂಗಳೂರು : ರಾಜ್ಯಾಧ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ ( Heavy Rain ). ಹಲವು ಜಿಲ್ಲೆಗಳಲ್ಲಿ ಎಡೆಬಿಡದೇ ಸುರಿಯುತ್ತಿರುವಂತ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಮನೆಯಿಂದ ಹೊರ ಬರಲಾಗದಂತ ಸ್ಥಿತಿಯನ್ನು ಜನರು ಎದುರಿಸುತ್ತಿದ್ದಾರೆ.
ಭಾರೀ ಮಳೆಯ ಕಾರಣದಿಂದ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜು.06 ರಿಂದ 09ರವರೆಗೆ ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯ ಆಂಬಳೆ ಹಾಗೂ ಲಕ್ಕಾ ಹೋಬಳಿ ಹೊರತುಪಡಿಸಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ ಮತ್ತು ಎನ್ ಆರ್ ಪುರ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟಿಸುತ್ತಿರುವ ಕಾರಣ, ಇಂದು(ಜು.6) ಈ ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಜಿಲ್ಲೆಯ ಅನೇಕ ತಾಲೂಕುಗಳಲ್ಲಿ ಮನೆಯಿಂದ ಹೊರಬರದ ಪರಿಸ್ಥಿತಿ ಇದೆ. ಈ ಹಿನ್ನಲೆಯಲ್ಲಿಯೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಒಟ್ಟಾರೆ ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಅಬ್ಬರದ ಮಳೆ ಸುರಿಯುತ್ತಿದ್ದು, ಅವಾಂತರಗಳು ಸೃಷ್ಟಿಯಾಗುತ್ತಿದೆ. ಮಳೆ ಇನ್ನೆರಡು ದಿನ ಮುಂದುವರಿಯಲಿದ್ದು, ಜನತೆ ಎಚ್ಚರಿಕೆಯಿಂದ ಇರಬೇಕಿದೆ.