ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಗುರುವಾರವೂ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಶುಕ್ರವಾರ(ಜು.8) ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾಬಿ.ಸಿ. ಸತೀಶ ಅವರು ಆದೇಶ ಹೊರಡಿಸಿದ್ದಾರೆ.
ಭಾರೀ ಗಾಳಿ ಮಳೆಗೆ ಜಿಲ್ಲೆಯ ಹಲವೆಡೆ ಮರಗಳು ಉರುಳಿದ ಪರಿಣಾಮ ವಿದ್ಯುತ್ ಕಂಬಗಳು ಮುರಿದಿದ್ದು, ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಿದೆ. ಕೊಡ್ಲಿಪೇಟೆ ಹೋಬಳಿಯ ಶಿವರಳ್ಳಿ ಗ್ರಾಮದಲ್ಲಿ ಮಳೆಯಿಂದಾಗಿ ಸುಶೀಲಾ ಎಂಬವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ.
ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಸಮೀಪ ಅಲ್ಪ ಪ್ರಮಾಣದ ಬರೆ ಕುಸಿತವಾಗಿದ್ದು, ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ ಎಂದು ತಹಶೀಲ್ದಾರ್ ಪಿ.ಎಸ್.ಮಹೇಶ್ ಅವರು ತಿಳಿಸಿದ್ದಾರೆ.
ಭಾಗಮಂಡಲದಲ್ಲಿ 143 ಮಿ.ಮೀ. ಮಳೆ: ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 68.01 ಮಿ.ಮೀ. ಮಳೆಯಾಗಿದೆ.
ಭಾಗಮಂಡಲದಲ್ಲಿ ಅತೀ ಹೆಚ್ಚು ಅಂದರೆ 143.40 ಮಿ.ಮೀ.ಮಳೆ ದಾಖಲಾಗಿದೆ.